ಬಳ್ಳಾರಿ, 30 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಾಗರಿಕ ಹೋರಾಟ ಸಮಿತಿ (ಬಿಎನ್‍ಹೆಚ್‍ಎಸ್) ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಗತ್ಯವಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಹಮ್ಮಿಕೊಂಡಿದ್ದ `ಒಂದು ಲಕ್ಷ ಸಹಿ'ಗಳ ದಾಖಲೆಯನ್ನು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಗೆ ಬುಧವಾರ ಸಲ್ಲಿದೆ.
ಬಳ್ಳಾರಿ ನಾಗರಿಕ ಹೋರಾಟ ಸಮಿತಿ (ಬಿಎನ್‍ಎಚ್‍ಎಸ್)ನ ಸಂಚಾಲಕ ಆರ್. ಸೋಮಶೇಖರಗೌಡ ಅವರ ನೇತೃತ್ವದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶುದ್ಧವಾದ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳು, ರಸ್ತೆ, ಒಳ ಚರಂಡಿ, ಇನ್ನಿತರೆ ಮೂಲಭೂತ ಸೌಲಭ್ಯಗಳಿಗಾಗಿ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು, ನಾಗರೀಕರು ಮತ್ತು ಗಣ್ಯರಿಂದ ಸಹಿ ಸಂಗ್ರಹ ಮಾಡಲಾಗಿತ್ತು. ಅಲ್ಲದೇ, ಬಹಿರಂಗ ಸಮಾವೇಶವೂ ನಡೆದಿತ್ತು.
ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು, ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಮನವಿಯನ್ನು ಸ್ವೀಕರಿಸಿ, ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಮತ್ತು ಪಾಲಿಕೆಯ ಅಧಿಕಾರಿಗಳ ಜೊತೆಯಲ್ಲಿ ಶೀಘ್ರದಲ್ಲಿ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಬಳ್ಳಾರಿ ನಾಗರಿಕ ಹೋರಾಟ ಸಮಿತಿಯು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಿ ಖಲೀಲ್ ಮತ್ತು ಮೇಯರ್ ಮುಲ್ಲಂಗಿ ನಂದೀಶ್ ಅವರಿಗೆ ಮನವಿ ಸಲ್ಲಿಸಿದಾಗ, ಬಳ್ಳಾರಿಯ ಬಾಪೂಜಿನಗರ, ಪಿಂಜಾರಓಣಿ, ಜನತಾ ಗ್ಯಾರೇಜ್, ನಾಲಾಬೀದಿ, ಕಪ್ಪಗಲ್ಲು ರಸ್ತೆ, ಸುಧಾಕ್ರಾಸ್ ಸೇರಿ ವಿವಿಧ ಪ್ರದೇಶಗಳ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲಿ ಸ್ಥಳಗಳಿಗೆ ಭೇಟಿ ನೀಡಿ ಪರಿಹರಿಸಲಾಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್