ಕೋಲಾರ, 31 ಜುಲೈ (ಹಿ.ಸ.) :
ಆ್ಯಂಕರ್ : ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿಷ್ಟಾವಂತ ಹಾಗೂ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಎಲ್ಲಾ ೧೭ ವಾರ್ಡುಗಳಲ್ಲಿಯೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲು ಬದ್ದತೆಯಿಂದ ಕೆಲಸ ಮಾಡಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಹಾಗೂ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಕರೆ ನೀಡಿದರು.
ಕೋಲಾರ ತಾಲ್ಲೂಕು ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನೀಡಿದ್ದ ಎ ಮತ್ತು ಬಿ ಫಾರಂಗಳನ್ನು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಅವರಿಗೆ ಹಸ್ತಂತರಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ಶಿಷ್ಟಾಚಾರದ ಪ್ರಕಾರ ಪಕ್ಷ ಕಣಕ್ಕಿಳಿಯಲಿರುವ ಅಭ್ಯರ್ಥಿಗಳಿಗೆ ನೀಡಬೇಕಾದ ಎ,ಬಿ.ಫಾರಂಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದು, ಅವುಗಳನ್ನು ಇದೀಗ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಿಗೆ ಹಸ್ತಂತರಿಸುತ್ತಿರುವುದಾಗಿ ತಿಳಿಸಿದರು.
ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿದೆ, ಇಲ್ಲಿ ಕಣಕ್ಕಿಳಿಯುವ ಪಕ್ಷದ ಅಭ್ಯರ್ಥಿಗಳಿಗೆ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು,ಸಚಿವರ ಕೃಪಾಶೀರ್ವಾದವಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ, ಎಲ್ಲಾ ೧೭ ವಾರ್ಡುಗಳಲ್ಲೂ ಕಾಂಗ್ರೆಸ್ ಗೆದ್ದುಬರಬೇಕು ಎಂದರು.
ಪಕ್ಷದ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ, ಕೋಲಾರ ತಾಲ್ಲೂಕು ಕಾಂಗ್ರೆಸ್ನ ಭದ್ರಕೋಟೆಯಾಗಿದೆ, ಕೆ.ಎಚ್.ಮುನಿಯಪ್ಪ ಅವರನ್ನು ೭ ಬಾರಿ ಸಂಸದರನ್ನಾಗಿಸಲು ನಿರೀಕ್ಷೆಗೂ ಮೀರಿ ಮತ ಹಾಕಿದ ನಿಷ್ಟಾವಂತ ಕಾರ್ಯಕರ್ತರು ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿದ್ದಾರೆ, ಇಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಆದರೆ ಮುಖಂಡರು,ಕಾರ್ಯಕರ್ತರು ಮೈಮರೆತು ಕೂರದೇ ಹಗಲಿರುಳು ಶ್ರಮಿಸಿ ಹೆಚ್ಚಿನ ಅಂತರದಿಂದ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದರು.
ಹಿಂದಿನ ವೇಮಗಲ್ ವಿಧಾನಸಭಾ ಕ್ಷೇತ್ರ ಬೈರೇಗೌಡರ ಕೇತ್ರ, ಅವರ ಮಗ ಕೃಷ್ಣಬೈರೇಗೌಡರನ್ನು ಗೆಲ್ಲಿಸಿದ ಕ್ಷೇತ್ರ, ಇದೀಗ ಕೃಷ್ಣಬೈರೇಗೌಡರು ಕಾಂಗ್ರೆಸ್ ಪಕ್ಷದಲ್ಲಿದ್ದು, ಬಲ ತುಂಬಿದ್ದಾರೆ, ಜತೆಗೆ ಸಚಿವ ಕೆ.ಎಚ್.ಮುನಿಯಪ್ಪ ಶಕ್ತಿಯಾಗಿದ್ದಾರೆ. ಈ ಭಾಗದಲ್ಲಿ ಇದೀಗ ಪಟ್ಟಣ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಗೆಲುವು ಸಾಧಿಸಲು ಒಟ್ಟಾಗಿ ದುಡಿಯೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್,ಮುಖಂಡ ನಗರಸಭಾ ಸ್ಥಾಯಿ ಸಮಿತಿ ಮಾಜಿ ಸದಸ್ಯ ಸೋಮಶೇಖರ್ ಮತ್ತಿತರರಿದ್ದರು.
ಚಿತ್ರ : ಕೋಲಾರ ತಾಲ್ಲೂಕು ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನೀಡಿದ್ದ ಎ ಮತ್ತು ಬಿ ಫಾರಂಗಳನ್ನು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಅವರಿಗೆ ಹಸ್ತಂತರಿಸಿದರು
‘
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್