ಕೊಪ್ಪಳ, 09 ಜುಲೈ (ಹಿ.ಸ.) :
ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ)ವು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5 ಸಾವಿರ ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.
ಯಲಬುರ್ಗಾ ಪಟ್ಟಣದ ನಿವಾಸಿ ಮಹೇಶ ಖಂಡ್ರಿ ಎಂಬ ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ 2023ರ ಸೆಪ್ಟೆಂಬರ್ 05 ರಿಂದ 2024 ರ ಫೆಬ್ರವರಿ 24 ರವರೆಗೆ ಹಲವಾರು ಬಾರಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದು, ಯಾರಿಗೂ ಹೇಳದಂತೆ ತಾಕೀತು ಮಾಡಿದ್ದನು. ಬಾಲಕಿಯೊಂದಿಗೆ ಆರೋಪಿಯು ಜೊತೆಗಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ನಂತರ ಓಡಿ ಹೋಗಿದ್ದನು. ನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಠಾಣೆಯ ಪಿ.ಎಸ್.ಐ ವಿಜಯ ಪ್ರತಾಪ ಅವರು . ಪ್ರಥಮ ಹಂತದ ತನಿಖೆ ನಡೆಸಿದ್ದರು. ಮುಂದಿನ ತನಿಖೆಯನ್ನು ಯಲಬುರ್ಗಾ ಸಿಪಿಐ ಮೌನೇಶ್ವರ ಮಾಲಿಪಾಟೀಲ ಅವರು ನಿರ್ವಹಿಸಿ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವು ಸ್ಪೇ.ಎಸ್‍ಸಿ(ಪೋಕ್ಸೋ) ಸಂ: 20/2024 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಕುಮಾರ ಡಿ.ಕೆ ಅವರು ಆರೋಪಿತನ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5,000/- ಗಳ ದಂಡವನ್ನು ವಿಧಿಸಿ ಜುಲೈ 3 ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು. ಯಲಬುರ್ಗಾ ಪೊಲೀಸ್ ಠಾಣೆಯ ಸಿಬ್ಬಂದಿ ವಿಜಯಲಕ್ಷ್ಮೀ ಇವರು ಸಾಕ್ಷೀದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ)ದ ವಿಶೇಷ ಸರ್ಕಾರಿ ಅಭಿಯೋಜಕರ (ಪೋಕ್ಸೋ) ಕಾರ್ಯಾಲಯದ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್