ಹಾಸನ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.
ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.
ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa