ಹೊಸಪೇಟೆ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳ ಪಾಲನೆ ಮಾಡುವುದರ ಜತೆಗೆ ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಬೇಕಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ ಅವರು ಹೇಳಿದ್ದಾರೆ.
ವಿಶ್ವ ಪಾರಂಪರಿಕ ತಾಣ ಹಂಪಿಯ ಶ್ರೀವಿಜಯವಿಠಲ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಬೈಕ್ ರ‍್ಯಾಲಿ ಜಾಥಾಕ್ಕೆ ಚಾಲನೆ ನೀಡಿ ಅವರು ಭಾನುವಾರ ಮಾತನಾಡಿದರು.
ಗಣತಂತ್ರ ವ್ಯವಸ್ಥೆಯಲ್ಲಿ ಜನರಿಗೆ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 2007 ರಲ್ಲಿ ವಿಶ್ವಸಂಸ್ಥೆಯಿಂದ ಸೆ.15 ನ್ನು ಪ್ರಜಾಪ್ರಭುತ್ವ ದಿನವನ್ನಾಗಿ ಘೋಷಣೆ ಮಾಡಲಾಗಿದೆ. 1988 ರಲ್ಲಿ ಹಲವು ಪ್ರಜಾಪ್ರಭುತ್ವ ಒಕ್ಕೂಟ ಸಂಸ್ಥೆಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಘೋಷಿಸಬೇಕೆಂದು ನಿರ್ಣಯ ಕೈಗೊಂಡವು. ಬಳಿಕ ವಿಶ್ವಸಂಸ್ಥೆ ಅಧಿಕೃತವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಘೋಷಿಸಿ ಆಚರಣೆಯನ್ನು ಜಾರಿಗೆ ತರಲಾಯಿತು. ಪ್ರಜೆಗಳಿಂದ ಪ್ರಜಾಗಳಿಗಾಗಿ, ಪ್ರಜೆಗಳಿಗೋಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವ ಕೇವಲ ಸಂವಿಧಾನಿಕ ರಚನೆಯಾಗಿಲ್ಲ, ಅದೊಂದು ಚೈತನ್ಯವಾಗಿದೆ. ಅದರಲ್ಲೂ ಭಾರತದಲ್ಲಿ ಪ್ರಜಾಪ್ರಭುತ್ವವು ಕೇವಲ ಸಂವಿಧಾನದ ಅಶಯಗಳನ್ನು ಸಂಗ್ರಹವಾಗಿರದೇ ನಮ್ಮೆಲ್ಲರ ಜೀವನದ ಆಶಯಗಳನ್ನು ಸಂಗ್ರಹಿಸಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಡಳಿತದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಪ್ರಜಾಪ್ರಭುತ್ವದ ಅಗತ್ಯಗಳನ್ನು ಆಡಳಿತ, ಮಾನವ ಹಕ್ಕುಗಳು, ಕಾನೂನಿನ ನಿಯಮ, ಸ್ವಾತಂತ್ರ್ಯ ಮತ್ತು ಸಮಾನತೆ ಬಗ್ಗೆ ಹೆಚ್ಚು ಪ್ರಚಾರ ನೀಡಿ ಜನರನ್ನು ಜಾಗೃತಗೊಳಿಸುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ