ಹುಬ್ಬಳ್ಳಿ, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ದ್ವಿಗುಣ ಮಾತ್ರವಲ್ಲ, ಹಲವು ಪಟ್ಟು ಹೆಚ್ಚಿದೆ. ಔಷಧಿ ಖರೀದಿ, ವರ್ಗಾವಣೆ ಹೀಗೆ ಎಲ್ಲದಕ್ಕೂ ಹಣ ಸಂಗ್ರಹಿಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಮಾದ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನೋಡಿದರೆ ʼಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರʼ ಎನ್ನುವಂತಿದೆ. ಅಷ್ಟರ ಮಟ್ಟಿಗೆ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ದ್ವಿಗುಣಗೊಂಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರದು ದ್ವಿಗುಣವಲ್ಲ ಹಲವು ಪಟ್ಟು ಹೆಚ್ಚಾಗಿದೆ. ವರ್ಗಾವಣೆ ದಂಧೆಯೇ ನಡೆದಿದೆ. ಔಷಧಿ ಖರೀದಿಯಿಂದ ಹಿಡಿದು, ತಹಶೀಲ್ದಾರ್ ಕಚೇರಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿ, ಸಬ್ ರಿಜಿಸ್ಟ್ರಾರ್ ಕಚೇರಿ ಹೀಗೆ ಎಲ್ಲಾ ಕಡೆ ಭ್ರಷ್ಟಾಚಾರ ಎಲ್ಲೆ ಮೀರಿದೆ ಎಂದು ಆರೋಪಿಸಿದರು.
ಹಿಂದಿನ ಸರ್ಕಾರದಲ್ಲಿನ ಕೆಲಸ-ಕಾರ್ಯ, ಕಾಮಗಾರಿಗಳನ್ನು ಮುಂದುವರಿಸಲು ಸಹ ಹಣ ಪಡೆದುಕೊಳ್ಳುತ್ತಿದ್ದಾರೆ ಎಂದ ಸಚಿವ ಜೋಶಿ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅಭಿವೃದ್ಧಿ ನಿಂತ ನೀರಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa