ಅತಿವೃಷ್ಟಿ ಹಾನಿ, ಪರಿಹಾರ ಕ್ರಮಗಳ ಕುರಿತು ಸಿದ್ದರಾಮಯ್ಯ ಸಭೆ
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಮುಂಗಾರು ಹಂಗಾಮಿನಲ್ಲಿ ಜೂನ
Cm meeting


ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ. ವಾಡಿಕೆ ಮಳೆ 721 ಮಿ.ಮೀ ಇದ್ದರೆ, ಈ ಬಾರಿ 753 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇಕಡಾ 23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಚಾಮರಾಜನಗರದಲ್ಲಿ ಶೇಕಡಾ 24ರಷ್ಟು ಕಡಿಮೆ ಮಳೆಯಾದರೆ, ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಶೇಕಡಾ 20ಕ್ಕಿಂತ ಹೆಚ್ಚು ಮಳೆಯಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷದಿಗಿಂತ ಸ್ವಲ್ಪ ಕಡಿಮೆಯಿದ್ದು, ಗರಿಷ್ಟ ಸಾಮರ್ಥ್ಯ 895.62 ಟಿಎಂಸಿಗೆ ಹೋಲಿಸಿದರೆ ಪ್ರಸ್ತುತ 840.52 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 856.17 ಟಿಎಂಸಿ ನೀರು ಲಭ್ಯವಿತ್ತು.

ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8 ಕ್ರೆಸ್ಟ್ ಗೇಟ್‌ಗಳು ಅಳವಡಿಕೆಗೆ ಸಿದ್ಧವಾಗಿವೆ. ಕ್ರೆಸ್ಟ್ ಗೇಟ್ ಬದಲಾವಣೆ ಮತ್ತು ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು. ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸುವುದು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ಆದ್ದರಿಂದ ನೀರು ಹರಿಸುವ ಮೊದಲು ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಮಳೆ ಹಾನಿಯಿಂದ ಹಾನಿಗೀಡಾದ ಮನೆಗಳು, ಬೆಳೆ ಹಾಗೂ ಜಾನುವಾರುಗಳಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸಿಎಂ ತಿಳಿಸಿದರು. ರಾಜ್ಯದಲ್ಲಿ ಶೇಕಡಾ 98 ಬಿತ್ತನೆ ಪೂರ್ಣಗೊಂಡಿದ್ದು, ಗುರಿಯಾಗಿದ್ದ 82.50 ಲಕ್ಷ ಹೆಕ್ಟೇರ್‌ಗಳಲ್ಲಿ 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆ ನಡೆದಿದೆ.

ಇದುವರೆಗೆ ನಡೆದ ಪ್ರಾಥಮಿಕ ಸಮೀಕ್ಷೆ ಪ್ರಕಾರ 4,80,256 ಹೆಕ್ಟೇರ್ ಕೃಷಿ ಬೆಳೆ ಹಾಗೂ 40,407 ಹೆಕ್ಟೇರ್ ತೋಟಗಾರಿಕಾ ಬೆಳೆ ಸೇರಿ ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಮಳೆಯಿಂದ ಒಟ್ಟು 111 ಮಂದಿ ಸಾವಿಗೀಡಾಗಿದ್ದು, ಎಲ್ಲರಿಗೂ ಪರಿಹಾರ ವಿತರಿಸಲಾಗಿದೆ. ಒಟ್ಟು 5.55 ಕೋಟಿ ರೂ. ಪರಿಹಾರ ನೀಡಲಾಗಿದೆ. 651 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 9,087 ಮನೆಗಳು ಭಾಗಶಃ ಹಾನಿಗೀಡಾಗಿವೆ. ಈಗಾಗಲೇ ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಮತ್ತು ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ.

ಅದರ ಜೊತೆಗೆ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಇದಕ್ಕೆ 1.52 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande