
ಗದಗ, 10 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ವತಿಯಿಂದ ನಡೆಯುತ್ತಿರುವ ಮೆಕ್ಕೆಜೋಳ ಖರೀದಿ ಕೇಂದ್ರದಲ್ಲಿ ಪ್ರಾಮಾಣಿಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಂಘದ ಸದಸ್ಯ ಹಾಗೂ ಪಕ್ಷಾತೀತ ರೈತಪರ ಹೋರಾಟ ವೇದಿಕೆ ತಾಲೂಕಾಧ್ಯಕ್ಷ ಮಹೇಶ ಹೊಗೆಸೊಪ್ಪಿನ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರ ಹೋರಾಟದ ಫಲವಾಗಿ ರಾಜ್ಯದಲ್ಲಿಯೇ ಪ್ರಥಮವಾಗಿ ಆರಂಭಗೊಂಡ ಟಿಎಪಿಸಿಎಂಎಸ್ ಮೆಕ್ಕೆಜೋಳ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು ಒಂದು ತಿಂಗಳಾದರೂ ಅನೇಕ ರೈತರಿಗೆ ಇನ್ನೂ ಮಾರಾಟಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ತಡವಾಗಿ ನೋಂದಣಿ ಮಾಡಿಕೊಂಡ ಕೆಲ ಪ್ರಭಾವಿ ರೈತರು ಈಗಾಗಲೇ ಮೆಕ್ಕೆಜೋಳ ಮಾರಾಟ ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಮಾರಾಟ ಮಹಾಮಂಡಳದ ಅಧಿಕಾರಿಗಳ ಸೂಚನೆಯಂತೆ ಕೆಲ ರೈತರ ಮೆಕ್ಕೆಜೋಳವನ್ನು ಖರೀಸಲಾಗಿದೆ, ಸರದಿಯಲ್ಲಿ ಇದ್ದ ರೈತರು ಬಂದಿಲ್ಲ ಎಂಬ ಹಾರಿಕೆ ಉತ್ತರಗಳನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಆದರೆ ಈ ಕುರಿತು ರೈತ ಸಂಘಟನೆಗಳು ಮಾಡುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ಅಲ್ಲಗಳೆಯುವಂತಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದಲ್ಲದೇ ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿದ ಎಲ್ಲ ರೈತರಿಗೆ ಸರ್ಕಾರ ಘೋಷಿಸಿರುವ ಪ್ರತಿ ಕ್ವಿಂಟಲ್‌ಗೆ 250 ರೂ ಸಹಾಯಧನ ತಕ್ಷಣ ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಮಾರಾಟ ಮಾಡಿ ಒಂದು ತಿಂಗಳಾದರೂ ಇನ್ನೂ ರೈತರ ಖಾತೆಗೆ ಹಣ ಜಮೆಯಾಗಿಲ್ಲ. ಕೂಡಲೇ ಬಾಕಿ ಮೊತ್ತವನ್ನು ಜಮೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ರೈತರ ಶ್ರಮಕ್ಕೆ ನ್ಯಾಯ ಸಿಗಬೇಕು. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮಹೇಶ ಹೊಗೆಸೊಪ್ಪಿ ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP