
ನವದೆಹಲಿ, 12 ಜನವರಿ (ಹಿ.ಸ.) :
ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಜೂನ್ 30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು.
ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಈ ವೇಳೆ ಸರ್ಕಾರದ ಪರ ವಕೀಲರು, ಚುನಾವಣೆಗೂ ಮುನ್ನ ನಡೆಯಬೇಕಾದ ಮೀಸಲಾತಿ ಸಂಬಂಧಿತ ಅಂತಿಮ ಹಂತದ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಅವು ಫೆಬ್ರವರಿ 28ರೊಳಗೆ ಪೂರ್ಣಗೊಳ್ಳಲಿವೆ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಮೀಸಲಾತಿ ಪ್ರಕ್ರಿಯೆ ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಮುಂದಿನ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕೆಂದು ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದರು.
ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರ ವೇಳೆಗೆ ಮತದಾರರ ಪಟ್ಟಿ ಪರಿಶೀಲನಾ ಪ್ರಕ್ರಿಯೆ ಅಂತ್ಯಗೊಳ್ಳಲಿದೆ ಎಂದು ತಿಳಿಸಿದರು. ಅದರ ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿರುವುದರಿಂದ, ಮೇ ತಿಂಗಳ ಕೊನೆ ವಾರದವರೆಗೆ ಸಮಯ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಸಲು ಎಷ್ಟು ಸಮಯ ಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ, ಜೂನ್ ವರೆಗೆ ಸಮಯ ಬೇಕಾಗಬಹುದು ಎಂದು ತಿಳಿಸಿತು. ಎಲ್ಲ ವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಬೇಕು ಎಂದು ಸ್ಪಷ್ಟ ಆದೇಶ ನೀಡಿತು.
ಜೊತೆಗೆ ರಾಜ್ಯ ಸರ್ಕಾರ ಮತ್ತೆ ಕಾಲಾವಕಾಶ ಕೇಳದಂತೆ ಎಚ್ಚರಿಕೆ ನೀಡಿದ ನ್ಯಾಯಾಲಯ, ಚುನಾವಣಾ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಜವಾಬ್ದಾರಿ ಸರ್ಕಾರ ಹಾಗೂ ಚುನಾವಣಾ ಆಯೋಗದ ಮೇಲಿದೆ ಎಂದು ಸ್ಪಷ್ಟಪಡಿಸಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa