ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟಕ್ಕೆ ಪೂರ್ವೋತ್ಸವ
ತುಮಕೂರು, 13 ಜನವರಿ (ಹಿ.ಸ.); ಆ್ಯಂಕರ್:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 16ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರ್ನಾಟಕ ಕ್ರೀಡಾಕೂಟ–2026ರ ಪೂರ್ವೋತ್ಸವ ಕಾರ್ಯಕ್ರಮ, ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ
Pre


ತುಮಕೂರು, 13 ಜನವರಿ (ಹಿ.ಸ.);

ಆ್ಯಂಕರ್:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 16ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರ್ನಾಟಕ ಕ್ರೀಡಾಕೂಟ–2026ರ ಪೂರ್ವೋತ್ಸವ ಕಾರ್ಯಕ್ರಮ, ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ ಹಾಗೂ ನವೀಕೃತ ಕ್ರೀಡಾಂಗಣದ ಶಿಲಾನ್ಯಾಸವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನೆರವೇರಿಸಿದರು.

ರಾಜ್ಯಮಟ್ಟದ ಪ್ರತಿಷ್ಠಿತ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜಿಸಿರುವುದು ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಿದ್ದು, ಈ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಡಾ. ಪರಮೇಶ್ವರ ಹೇಳಿದರು.

ಜನವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಕ್ರೀಡಾಕೂಟವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದು, ಜನವರಿ 22ರಂದು ರಾಜ್ಯಪಾಲರು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಸಮಾರೋಪ ಭಾಷಣ ಮಾಡಲಿದ್ದಾರೆ. ಕ್ರೀಡಾಕೂಟವನ್ನು ವಿಜೃಂಭಣೆಯಿಂದ ನಡೆಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪ್ರತಿ ವರ್ಷ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 5,000ರಿಂದ 10,000ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಏಷ್ಯಾ ಮಟ್ಟದಲ್ಲಿ ಕನಿಷ್ಠ 500 ಕ್ರೀಡಾಪಟುಗಳನ್ನು ತಯಾರಿಸುವ ಗುರಿಯನ್ನು ಕರ್ನಾಟಕ ಒಲಂಪಿಕ್ ಸಂಸ್ಥೆ ಹೊಂದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ ಕ್ರೀಡಾಕ್ಷೇತ್ರದಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಒಂದು ವರ್ಷದೊಳಗೆ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವನ್ನು ಪೂರ್ಣಗೊಳಿಸಿ, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸುವ ಉದ್ದೇಶ ಸರ್ಕಾರದದಾಗಿದೆ ಎಂದು ಡಾ. ಪರಮೇಶ್ವರ ಹೇಳಿದರು.

ಇನ್ನು ಒಳಾಂಗಣ ಕ್ರೀಡಾಂಗಣಕ್ಕೆ ತಮ್ಮ ಹೆಸರನ್ನು ಇಡುವ ಬಗ್ಗೆ ಕೆಲವು ವಿರೋಧಗಳು ವ್ಯಕ್ತವಾದರೂ, ತಾವು ಒಬ್ಬ ಕ್ರೀಡಾಪಟುವಾಗಿ ಜಿಲ್ಲೆಗೆ ನೀಡಿರುವ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್, ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಆರ್. ಚೇತನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande