
ಧಾರವಾಡ, 13 ಜನವರಿ (ಹಿ.ಸ.);
ಆ್ಯಂಕರ್:ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜಾರಿಯಲ್ಲಿಲ್ಲ. ಹೀಗಾಗಿ ಮತದಾರರ ಪಟ್ಟಿಯಿಂದ ಯಾವುದೇ ಮತದಾರರ ಹೆಸರುಗಳನ್ನು ತೆಗೆದುಹಾಕುವ ಅಥವಾ ಹೊಸದಾಗಿ ಸೇರ್ಪಡೆ ಮಾಡುವ ಕಾರ್ಯ ನಡೆಯುತ್ತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತದಾರರ ಮ್ಯಾಪಿಂಗ್ ಕಾರ್ಯವು ಒಟ್ಟಾರೆಯಾಗಿ ಶೇ. 63.76 ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ, 2025ರ ಮತದಾರರ ಪಟ್ಟಿಯಲ್ಲಿನ ಮತದಾರರನ್ನು 2002ರ ಮತದಾರರ ಪಟ್ಟಿಗೆ ತಾಳೆ ಮಾಡುವ ಮ್ಯಾಪಿಂಗ್ ಹಾಗೂ ಕುಟುಂಬ ಸದಸ್ಯರ (ಪ್ರೊಜಿನಿ) ಮಾಹಿತಿ ಸಂಗ್ರಹ ಕಾರ್ಯವನ್ನು ಪೂರ್ವಸಿದ್ಧತೆಯಾಗಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮ್ಯಾಪಿಂಗ್ ಮತ್ತು ಪ್ರೊಜಿನಿ ತಾಳೆ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವಂತೆ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಡಿಸಿಪಿ ಮಹಾನಿಂಗ ನಂದಗಾವಿ ಸೇರಿದಂತೆ ಚುನಾವಣೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa