ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ : ನ್ಯಾ.ರೋಣ ವಾಸುದೇವ ಸೂಚನೆ
ಚಿತ್ರದುರ್ಗ, 14 ಜನವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು
Road safety


ಚಿತ್ರದುರ್ಗ, 14 ಜನವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ರೋಣ ವಾಸುದೇವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಅಪಘಾತಗಳು ಗಂಭೀರ ಸಮಸ್ಯೆಯಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಜಿಲ್ಲೆಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕುರಿತು ಮಾಹಿತಿ ನೀಡಿದ ಕಾರ್ಮಿಕ ಇಲಾಖೆ ಅಧಿಕಾರಿಗಳು, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 670 ತಪಾಸಣೆಗಳನ್ನು ನಡೆಸಲಾಗಿದ್ದು, 05 ಗಂಡು ಹಾಗೂ 06 ಹೆಣ್ಣು ಮಕ್ಕಳನ್ನು ಸೇರಿಸಿ ಒಟ್ಟು 11 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 07 ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಕನಿಷ್ಠ ವೇತನ ಕಾಯ್ದೆಯಡಿ 06 ಕ್ಲೇಮ್ ಅರ್ಜಿಗಳನ್ನು ಸಹಾಯಕ ಕಾರ್ಮಿಕ ಆಯುಕ್ತರ ಬಳಿ ಸಲ್ಲಿಸಲಾಗಿದ್ದು, 01 ಪ್ರಕರಣವನ್ನು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ನ್ಯಾ. ರೋಣ ವಾಸುದೇವ ಹೇಳಿದರು.

ಪೋಕ್ಸೋ ಪ್ರಕರಣಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 2023ರಲ್ಲಿ 131, 2024ರಲ್ಲಿ 150 ಹಾಗೂ 2025ರ ಡಿಸೆಂಬರ್ ಅಂತ್ಯದವರೆಗೆ 167 ಸೇರಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 448 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದರು. ಈ ಹಿನ್ನೆಲೆಯಲ್ಲಿ ಶಾಲಾ–ಕಾಲೇಜು ಹಂತದಲ್ಲೇ ಪೋಕ್ಸೋ ಕಾಯ್ದೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ನ್ಯಾ. ರೋಣ ವಾಸುದೇವ ಅಭಿಪ್ರಾಯಪಟ್ಟರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ವಿವಿಧ ನ್ಯಾಯಾಧೀಶರು, ಡಿವೈಎಸ್‌ಪಿ ದಿನಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಘೆ, ಡಿಡಿಪಿಐ ಮಂಜುನಾಥ್ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande