
ತುಮಕೂರು, 15 ಜನವರಿ (ಹಿ.ಸ.) :
ಆ್ಯಂಕರ್ : ನಾಳೆ ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ 2025–26 ರ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಬಂದೋಬಸ್ತ್ ಸಂಬಂಧ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಐಜಿಪಿ ಲಾಬು ರಾಮ್ ಅವರು, ಮುಖ್ಯಮಂತ್ರಿಗಳ ಭೇಟಿ ಮತ್ತು ರಾಜ್ಯ ಮಟ್ಟದ ಮಹತ್ವದ ಕಾರ್ಯಕ್ರಮವನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಾರ್ವಜನಿಕರು, ಕ್ರೀಡಾಪಟುಗಳು ಹಾಗೂ ಗಣ್ಯ ಅತಿಥಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮ ನಡೆಯುವ ಮಹಾತ್ಮ ಗಾಂಧಿ ಕ್ರೀಡಾಂಗಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರ ನಿಯಂತ್ರಣ, ಪ್ರವೇಶ–ನಿರ್ಗಮನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳ ನಿರ್ವಹಣೆ ಮತ್ತು ನಿಗಾವಹಿಸುವ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೆ ತರಬೇಕೆಂದು ಪೊಲೀಸ್ ಸಿಬ್ಬಂದಿಗೆ ಸೂಕ್ತ ಸಲಹೆ ಹಾಗೂ ಮಾರ್ಗಸೂಚಿಗಳನ್ನು ನೀಡಿದರು.
ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa