
ಬೆಂಗಳೂರು, 18 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಭಾನುವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಎರಡನೇ ದಿನದ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಭಾಗವಹಿಸಿ, ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಧುನಿಕ ಪೊಲೀಸ್ ವ್ಯವಸ್ಥೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಜನದಟ್ಟಣೆ ನಿಯಂತ್ರಣ, ಟ್ರಾಫಿಕ್ ಸಮಸ್ಯೆ ನಿರ್ವಹಣೆ, ಸೈಬರ್ ಅಪರಾಧಗಳ ತಡೆ, ಡ್ರಗ್ಸ್ ದಂಧೆ ನಿರ್ಮೂಲನೆ ಸೇರಿದಂತೆ ಇಂದಿನ ಪೊಲೀಸ್ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳ ಕುರಿತು ಸಮಾವೇಶದಲ್ಲಿ ವಿವರವಾದ ಚರ್ಚೆ ನಡೆಯಿತು.
ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಹಾಗೂ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹೊಸ ತಂತ್ರಜ್ಞಾನ ಮತ್ತು ಆಧುನಿಕ ಅವಿಷ್ಕಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗೃಹ ಸಚಿವರು ಸಲಹೆ ನೀಡಿದರು. ಜೊತೆಗೆ, ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಇನ್ನಷ್ಟು ಬಲಪಡಿಸಬೇಕೆಂದು ಅವರು ಸೂಚಿಸಿದರು.
ಅಕ್ರಮ ಬಾಂಗ್ಲಾದೇಶಿ ವಲಸಿಗರು ಹಾಗೂ ವೀಸಾ ಅವಧಿ ಮುಗಿದ ಬಳಿಕವೂ ಅನಧಿಕೃತವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಿ, ದೇಶದಿಂದ ಗಡಿಪಾರು ಮಾಡಲು ಸೂಕ್ತ ಕಾನೂನು ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಪೊಲೀಸ್ ಇಲಾಖೆಯನ್ನು ತಾಂತ್ರಿಕವಾಗಿ ಮತ್ತಷ್ಟು ಬಲಪಡಿಸಿ, ಅಪರಾಧ ಚಟುವಟಿಕೆಗಳ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ಜರುಗಿಸಬೇಕು. ಈಗಾಗಲೇ ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆ ಎಂಬ ಖ್ಯಾತಿಯನ್ನು ಹೊಂದಿರುವ ಕರ್ನಾಟಕ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಿ, ಆ ಹೆಗ್ಗಳಿಕೆಯನ್ನು ಗಟ್ಟಿಗೊಳಿಸುವಂತೆ ಗೃಹ ಸಚಿವರು ಕರೆ ನೀಡಿದರು.
ಈ ಸಮಾವೇಶದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮುಖ್ಯಸ್ಥರಾದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಹಿರಿಯ ಪೊಲೀಸ್ ಅಧಿಕಾರಿ ಪ್ರಣವ್ ಮೊಹಾಂತಿ, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa