
ಧಾರವಾಡ, 19 ಜನವರಿ (ಹಿ.ಸ.) :
ಆ್ಯಂಕರ್ : ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಸ್ವಂತ ಮನೆಯ ಕನಸನ್ನು ನನಸಾಗಿಸುವ ಉದ್ದೇಶದಿಂದ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಅರ್ಹ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಕಾರ್ಯಕ್ರಮವನ್ನು ಜನವರಿ 24, 2026ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಬೇಕೆಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಿ, ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಕಾರ್ಯಕ್ರಮದ ಪೂರ್ವಸಿದ್ಧತೆಗಳಲ್ಲಿ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸರಬರಾಜು, ಶೌಚಾಲಯ, ಸಾರಿಗೆ, ಭದ್ರತೆ ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅವರು ನಿರ್ದೇಶನ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,169 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಘೋಷಿತ ಸ್ಲಂಗಳಲ್ಲಿರುವ 1,137 ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳಾಗಿ ಪುನರ್ ನಿರ್ಮಿಸಲಾಗಿದೆ. ಜೊತೆಗೆ 1,032 ಮನೆಗಳ ವಸತಿ ಸಮುಚ್ಚಯ ನಿರ್ಮಾಣಗೊಂಡಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ಸುಮಾರು 3,000 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa