ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ನೆಹರು
Meeting


ಶಿವಮೊಗ್ಗ, 08 ಜನವರಿ (ಹಿ.ಸ.) :

ಆ್ಯಂಕರ್ : ನಗರದ ನೆಹರು ಕ್ರೀಡಾಂಗಣದಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೊಲೀಸ್, ಹೋಂ ಗಾರ್ಡ್, ಪಾಲಿಕೆ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ನಂತರ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ರಿಂದ 9ರವರೆಗೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಗಣರಾಜ್ಯೋತ್ಸವ ಅಂಗವಾಗಿ ನಗರದ ಎಲ್ಲಾ ಸರ್ಕಾರಿ ಕಚೇರಿಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳನ್ನು ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದ ಸುಸೂತ್ರ ಆಯೋಜನೆಗಾಗಿ ಸಮಿತಿಗಳನ್ನು ರಚಿಸಲಾಗಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ನೆಹರೂ ಕ್ರೀಡಾಂಗಣದ ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಹಾಗೂ ಸಂಚಾರ ವ್ಯವಸ್ಥೆ ಕಲ್ಪಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆಹ್ವಾನ ಪತ್ರಿಕೆ ಮುದ್ರಣೆ ಮತ್ತು ವಿತರಣೆ, ವೇದಿಕೆ ಸಿದ್ಧತೆ, ಆಸನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ವಿದ್ಯುದ್ದೀಪ ಅಲಂಕಾರ, ಧ್ವನಿ ವ್ಯವಸ್ಥೆ, ಆರೋಗ್ಯ ಸೇವೆ, ಅಗ್ನಿಶಾಮಕ ಮತ್ತು ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವಕುಮಾರ್, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande