
ಶಿವಮೊಗ್ಗ, 08 ಜನವರಿ (ಹಿ.ಸ.) :
ಆ್ಯಂಕರ್ : ವಿವಿಧ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳು ಜನವರಿ 11ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 11.30ರಿಂದ 12.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ ನಡೆಯುವ ಪರೀಕ್ಷೆಗೆ 4,313 ಹಾಗೂ ಮಧ್ಯಾಹ್ನದ ಪರೀಕ್ಷೆಗೆ 4,271 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಶ್ನೆ ಪತ್ರಿಕೆಗಳ ಸಾಗಾಟಕ್ಕೆ ಮಾರ್ಗಗಳನ್ನು ನಿಗದಿಪಡಿಸಲಾಗಿದ್ದು, ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಠೇವಣಿಕರಿಸಲು ಹಾಗೂ ವಿತರಿಸಲು ಜಿಲ್ಲಾ ಖಜಾನೆಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ, ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳ ತಪಾಸಣೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಎ ಮತ್ತು ಬಿ ದರ್ಜೆಯ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಹಿರಿಯ ಪ್ರಾಂಶುಪಾಲರನ್ನು ಪ್ರಶ್ನೆ ಪತ್ರಿಕೆ ಪಾಲಕರನ್ನಾಗಿ ಹಾಗೂ ಉಪನ್ಯಾಸಕರನ್ನು ಜಾಗೃತ ದಳದ ಸದಸ್ಯರಾಗಿ ನೇಮಿಸಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಜ್ಯಾಮರ್‌ಗಳನ್ನು ಸ್ಥಾಪಿಸಲಾಗುತ್ತದೆ. ಎಲೆಕ್ಟ್ರಾನಿಕ್ ಸಾಧನಗಳು, ಡಿಜಿಟಲ್ ವಾಚುಗಳು ಮತ್ತು ಲೋಹದ ಆಭರಣಗಳಿಗೆ ಸಂಪೂರ್ಣ ನಿಷೇಧವಿದ್ದು, ನಿಯಮಾನುಸಾರ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಿಕಲಚೇತನ ಅಭ್ಯರ್ಥಿಗಳಿಗೆ ನೆಲಮಹಡಿಯಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಿ, ನಿಯಮಾನುಸಾರ ಸೌಲಭ್ಯ ಒದಗಿಸಬೇಕು ಎಂದು ಅವರು ಹೇಳಿದರು. ಪರೀಕ್ಷೆಗೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪರೀಕ್ಷೆಗಳನ್ನು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa