
ಗದಗ, 08 ಜನವರಿ (ಹಿ.ಸ.) :
ಆ್ಯಂಕರ್ : ಶಿರಹಟ್ಟಿ ಪೊಲೀಸ್ ಠಾಣೆಯ ಪಿ.ಎಸ್.ಐ ಈರಣ್ಣ ರಿತ್ತಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರನ್ನು ತಕ್ಷಣವೇ ಗದಗ ಜಿಲ್ಲೆಯಿಂದ ವರ್ಗಾವಣೆಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಆಗಮಿಸುವ ಎಲ್ಲ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಎಚ್ಚರಿಕೆ ನೀಡಿದ್ದಾರೆ.
ಗದಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈರಣ್ಣ ರಿತ್ತಿ ವರ್ಗಾವಣೆಗೆ ಆಗ್ರಹಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈರಣ್ಣ ರಿತ್ತಿ ಭ್ರಷ್ಟ ಅಧಿಕಾರಿ ಆಗಿದ್ದು, ಲಂಚದ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೆ ನೀಡುತ್ತಿದ್ದಾರೆಯೇ ಎಂಬ ಅನುಮಾನವೂ ಕಾಡುತ್ತಿದೆ ಎಂದು ಆರೋಪಿಸಿದರು.
ಬಳ್ಳಾರಿ ಗಲಾಟೆ ಪ್ರಕರಣವನ್ನು ಉಲ್ಲೇಖಿಸಿದ ಅವರು, ಬೆಳಿಗ್ಗೆ ನೇಮಕಗೊಂಡ ಎಸ್ಪಿಯನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿರುವುದು ರಾಜ್ಯ ಸರ್ಕಾರದ ದ್ವಿಮುಖ ನೀತಿಗೆ ಉದಾಹರಣೆ. ಈ ಮೂಲಕ ರಾಜ್ಯ ಸರ್ಕಾರ ಕಾನೂನನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.
ಇನ್ನು ಬಳ್ಳಾರಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣ ಕುರಿತು ಮಾತನಾಡಿದ ಅವರು, ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುವ ಉದ್ದೇಶವೇನು ಎಂಬ ಪ್ರಶ್ನೆ ಎದ್ದಿದೆ. ಈ ಹಿಂದೆ ರೆಡ್ಡಿ ಕುಟುಂಬವನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರವೇ ಹುನ್ನಾರ ನಡೆಸಿದೆಯೇ ಎಂಬ ಅನುಮಾನವಿದೆ ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಶಾಸಕರಿಗೊಂದು, ಜನಸಾಮಾನ್ಯರಿಗೊಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ಡಾ. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಹಾಗೂ ಕಾನೂನಿಗೆ ಇದರಿಂದ ಅವಮಾನವಾಗುತ್ತಿದೆ. ಜಗತ್ತಿಗೆ ರಾಮನನ್ನು ಸರಳವಾಗಿ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಹೆಸರನ್ನು ಬಳಸಿಕೊಂಡು ಬಳ್ಳಾರಿಯಲ್ಲಿ ರಾಜಕೀಯ ನಡೆಯುತ್ತಿದೆ. ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಸತೀಶ್ ರೆಡ್ಡಿ ಬೆಂಬಲಿಗರು ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ. ತಮ್ಮ ಶಾಸಕರನ್ನು ರಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕೊಲೆಯಾದ ಯುವಕನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ದ್ವಿಮುಖ ನೀತಿಯನ್ನು ಖಂಡಿಸಿ ಜ.07ರಂದು ಮುಳಗುಂದ ನಾಕಾದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಎಲ್ಲಾ ಹಿಂದೂಪರ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ರಾಜು ಖಾನಪ್ಪನವರ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕುಮಾರ ನಡಗೇರಿ, ಶಿವಯೋಗಿ ಹಿರೇಮಠ, ಈರಣ್ಣ ಪೂಜಾರ, ಪಿ.ಎಸ್. ಕಾಳೆ, ಸೋಮು ಗುಡಿ, ಹುಲಗಪ್ಪ ವಾಲ್ಮೀಕಿ, ಸುನೀಲ ಮುಳ್ಳಾಳ, ಸತೀಶ್ ಕುಂಬಾರ, ಹರೀಶ್ ಗೋಸಾವಿ, ವೆಂಕಟೇಶ್ ದೊಡ್ಡಮನಿ, ಕಿರಣ್ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP