ಮಡಗಾಂವ್–ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ
ಮಡಗಾಂವ್–ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ವಿಸ್ತರಣೆಯಿಂದ ಕರಾವಳಿ, ಉತ್ತರ ಕನ್ನಡ ಹಾಗೂ ಬೆಂಗಳೂರಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
madgaon-mangaluru-vande-bharat-extended-to-bengaluru


ಬೆಂಗಳೂರು, 01 ಅಕ್ಟೋಬರ್ (ಹಿ.ಸ.):

ಮಡಗಾಂವ್–ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಕುರಿತು ಕರಾವಳಿ ಭಾಗದ ಸಂಸದರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

ವಿಸ್ತರಣೆಯ ಬಳಿಕ ರೈಲು 26655/26656 ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಎಂಬ ಹೆಸರಿನಲ್ಲಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸಂಚರಿಸಲಿದೆ.

ಯಶವಂತಪುರದಿಂದ ಹೊರಟು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಮಂಗಳೂರು ಜಂಕ್ಷನ್, ಉಡುಪಿ, ಕುಂದಾಪುರ, ಬೈಂದೂರು, ಮುರುಡೇಶ್ವರ, ಗೋಕರ್ಣ ರೋಡ್ ಹಾಗೂ ಕಾರವಾರ ಮಾರ್ಗವಾಗಿ ಮಡಗಾಂವ್ ತಲುಪುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 2025ರ ಆಗಸ್ಟ್ನಲ್ಲಿ ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ ಈ ವಿಸ್ತರಣೆ ಕೈಗೊಳ್ಳಲಾಗಿದೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.

ಯಶವಂತಪುರ–ಮಂಗಳೂರು ಮಾರ್ಗದಲ್ಲಿ 16 ಬೋಗಿಗಳ ವಂದೇ ಭಾರತ್ ರೈಲಿನ ಪರೀಕ್ಷಾರ್ಥ ಸಂಚಾರವೂ ನಡೆದಿದ್ದು, ನಿಯಮಿತ ಸೇವೆ ಆರಂಭಿಸುವ ಮೊದಲು ಕಾರ್ಯಾಚರಣೆ ಮತ್ತು ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗಿದೆ.

ಈ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಎಕ್ಸನಲ್ಲಿ ಪ್ರತಿಕ್ರಿಯೆ ನೀಡಿದ್ದು “ಬೆಂಗಳೂರು ಮತ್ತು ಮಡಗಾಂವ್ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕೆಂಬ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಿರುವುದರಿಂದ ಕರಾವಳಿ ಹಾಗೂ ಉತ್ತರ ಕನ್ನಡ ಭಾಗದ ಜನರಿಗೆ, ಪ್ರವಾಸಿಗರಿಗೆ ಮತ್ತು ತೀರ್ಥಯಾತ್ರಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದಗಳು” ಎಂದು ಕಾಗೇರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande