
ಬೆಂಗಳೂರು, 12 ಅಕ್ಟೋಬರ್ (ಹಿ.ಸ.):
ಸುಪ್ರೀಂ ಕೋರ್ಟ್ಗೆ ಮೆರವಣಿಗೆ ನಡೆಸುವ ಮೂಲಕ ನ್ಯಾಯಾಲಯದ ಮೇಲೆ ಅನಗತ್ಯ ಒತ್ತಡ ಹೇರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಕ್ರಮ ಸಂವಿಧಾನ ವಿರೋಧಿ, ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳು ವಿಚಾರಣೆಯಲ್ಲಿವೆ. ನ್ಯಾಯಾಲಯವು ಸತ್ಯ, ವಾಸ್ತವಾಂಶಗಳು ಮತ್ತು ಕಾನೂನಿನ ಆಧಾರದ ಮೇಲೆ ತೀರ್ಪು ನೀಡಲಿದೆ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ ರಾಜಕೀಯ ಪ್ರೇರಣೆ ಮತ್ತು ದುರುದ್ದೇಶದಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನ್ಯಾಯಾಲಯದ ಮೇಲೆ ಒತ್ತಡ ಹೇರುವ ಈ ಕ್ರಮವು ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ವಿರುದ್ಧವೇ ದಂಗೆ ಏಳುವ ಪ್ರಯತ್ನದ ಮೊದಲ ಹೆಜ್ಜೆಯಂತೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸುಮಾರು 60 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರುವುದು ಅತ್ಯಂತ ಖೇದಕರ ಸಂಗತಿ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಕ್ರಮವನ್ನು ದೇಶದ ಎಲ್ಲ ನಾಗರಿಕರು ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.