

ವಿಜಯಪುರ, 12 ಅಕ್ಟೋಬರ್ (ಹಿ.ಸ.)
ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಹೋರಾಟ ನಡೆಯಿತು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂಭಾಗ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಳಿಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಯತ್ನಾಳ್ ಅವರು, ಬರದಿಂದ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ಸಮರ್ಪಕವಾಗಿಲ್ಲ ಎಂದು ಆಕ್ಷೇಪಿಸಿದರು. ರೈತರ ಸಂಕಷ್ಟವನ್ನು ಪರಿಗಣಿಸಿ ಪ್ರತಿ ಎಕರೆಗೆ ಕನಿಷ್ಠ ₹25 ಸಾವಿರ ಬರ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ಎದುರಾಗಿದ್ದು, ಅನೇಕ ಕುಟುಂಬಗಳು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರೈತರು ಹಾಗೂ ಗ್ರಾಮೀಣ ಕಾರ್ಮಿಕರು ಗುಳೆ ಹೋಗುವುದನ್ನು ತಡೆಯಲು ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಅವಶ್ಯಕತೆ ಇಲ್ಲದ ಬಿಡದಿ ಟೌನ್ಶಿಪ್ ಯೋಜನೆಗೆ ಹಣ ವ್ಯಯಿಸುವ ಬದಲು, ಆ ಹಣವನ್ನು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಳಸಬೇಕು. ಬಾಕಿ ಇರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನೀರಾವರಿ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರವನ್ನು ವಿಳಂಬ ಮಾಡದೆ ಒಂದೇ ಕಂತಿನಲ್ಲಿ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮತದಾರರ ಪಟ್ಟಿ ಕುರಿತು ಆಕ್ಷೇಪ:
ವಿಜಯಪುರ ನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಬಳಿಕ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ಹಲವು ಲೋಪದೋಷಗಳಿವೆ ಎಂಬ ಆರೋಪವನ್ನು ಪ್ರತಿಭಟನಾಕಾರರು ಮಾಡಿದರು.
ಮೃತ ಮತದಾರರ ಹೆಸರುಗಳು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವ ಮತದಾರರು ಹಾಗೂ ಅನುಮಾನಾಸ್ಪದ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿದಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಲಾಯಿತು. ಸಂಬಂಧಿಸಿದ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳನ್ನು ಮಾತ್ರ ಒಳಗೊಂಡಿರುವ ಪಾರದರ್ಶಕ ಹಾಗೂ ನೈಜ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಣೆಗಳನ್ನು ಪರಿಶೀಲಿಸಿ ಸೂಕ್ತ ತಿದ್ದುಪಡಿ ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಚುನಾವಣಾ ಆಯೋಗದ ವಿರುದ್ಧದ ಆರೋಪ ಖಂಡನೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಅವರಂತಹ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ, ಇಂತಹ ರಾಜಕೀಯ ಧೋರಣೆಯನ್ನು ಖಂಡಿಸಲಾಯಿತು.
ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಸಾರ್ವಜನಿಕ ವಿಶ್ವಾಸಕ್ಕೆ ಧಕ್ಕೆ ಉಂಟಾಗದಂತೆ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಇದೇ ವೇಳೆ, ಪ್ರತಿಭಟನೆಯಲ್ಲಿ ಕೆಲವು ಸಂಘಟನೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತೀವ್ರ ಆರೋಪಗಳನ್ನು ಮಾಡಲಾಯಿತು. ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಯಾವುದೇ ಆರೋಪಗಳಿದ್ದಲ್ಲಿ ಅವುಗಳ ಬಗ್ಗೆ ಕಾನೂನುಬದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು. ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ತನಿಖಾ ಸಂಸ್ಥೆಗಳು ವಾಸ್ತವಾಂಶ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂತು.
ಜಿಲ್ಲಾಧಿಕಾರಿಗಳಿಗೆ ಮನವಿ
ಪ್ರತಿಭಟನೆಯ ಬಳಿಕ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದರು. ಬರ ಪರಿಹಾರ ಹೆಚ್ಚಳ, ರೈತರಿಗೆ ಉದ್ಯೋಗ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ, ಭೂಸ್ವಾಧೀನಗೊಂಡ ರೈತರಿಗೆ ಪರಿಹಾರ, SIR ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಪರಿಶೀಲನೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಯಿತು.
ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಗ್ರಾಮೀಣ ಉದ್ಯೋಗಕ್ಕೆ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಖಂಡರು, ರೈತರು, ಸಂಘಟನೆಗಳ ಪದಾಧಿಕಾರಿಗಳು, ಹಿತೈಷಿಗಳು, ಮಹಿಳೆಯರು ಹಾಗೂ ವಿವಿಧ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು.
ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಮತ್ತು ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು ಎಂಬ ಒತ್ತಾಯದೊಂದಿಗೆ ಪ್ರತಿಭಟನೆ ಅಂತ್ಯಗೊಂಡಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande