
ಮಂಡ್ಯ, 12 ಅಕ್ಟೋಬರ್ (ಹಿ.ಸ.):
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಕೆಂಪಣ್ಣ ಸಾಗ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಎಸ್ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಜನರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಅವೈಜ್ಞಾನಿಕವಾಗಿ ಎಸ್ಐಆರ್ ಪ್ರಕ್ರಿಯೆ ನಡೆಸಿದ್ದಾರೆ ಎಂದು ದೂರಿದ ಅವರು, ಈ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಸೇರಿದಂತೆ ತನಿಖಾ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕವಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಬಳಿಕ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಮಾನಂದ, ಕುಬೇರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R