
ಬೆಂಗಳೂರು, 12 ಅಕ್ಟೋಬರ್ (ಹಿ.ಸ.):
ವಿಧಾನ ಪರಿಷತ್ನ ನಾಲ್ಕು ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.
ಒಟ್ಟು 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಅಕ್ಟೋಬರ್ 23ರಂದು ನಡೆಯಲಿರುವ ಮತದಾನಕ್ಕೆ ಮುನ್ನ ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿವೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಡುವೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ಶಿಕ್ಷಕರು ಮತ್ತು ಪದವೀಧರ ಮತದಾರರನ್ನು ಸೆಳೆಯಲು ಮೂರೂ ಪಕ್ಷಗಳ ಅಭ್ಯರ್ಥಿಗಳು ಸಭೆ, ಸಮಾವೇಶ ಹಾಗೂ ವೈಯಕ್ತಿಕ ಸಂಪರ್ಕದ ಮೂಲಕ ಮತಯಾಚನೆಯಲ್ಲಿ ತೊಡಗಿದ್ದಾರೆ.
ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು:
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ ಸೇರಿದಂತೆ ಆರು ಮಂದಿ ಸ್ಪರ್ಧಿಸುತ್ತಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮೋಹನ್ ಲಿಂಬಿಕಾಯಿ, ಬಿಜೆಪಿಯ ಎಸ್.ವಿ. ಸಂಕನೂರ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೇಮಠ್ ಹಾಗೂ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ ಸೇರಿದಂತೆ 10 ಮಂದಿ ಸ್ಪರ್ಧೆಯಲ್ಲಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶರಣಪ್ಪ ಮಟ್ಟೂರು ಮತ್ತು ಬಿಜೆಪಿಯ ಶಶಿಲ್ ನಮೋಶಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಮತದಾರರ ಮನವೊಲಿಕೆಗೆ ತೀವ್ರ ಕಸರತ್ತುನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಕಾಂಗ್ರೆಸ್ ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಅನುಸರಿಸುತ್ತಿದ್ದಾರೆ.
ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತಿದೆ.
ಪ್ರತಿದಿನ ವಿವಿಧೆಡೆ ಸಭೆ, ಸಮಾವೇಶಗಳನ್ನು ಆಯೋಜಿಸಿ ಮತದಾರರ ಬೆಂಬಲ ಪಡೆಯಲು ಪ್ರಯತ್ನಿಸಲಾಗುತ್ತಿದೆ.
ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಿಗದಿಯಾಗಿದೆ.
ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಚುನಾವಣೆ ನಡೆಯುವುದರಿಂದ ಮತ ಎಣಿಕೆ ಪ್ರಕ್ರಿಯೆ ದೀರ್ಘವಾಗುವ ಸಾಧ್ಯತೆಯಿದೆ. ಹೀಗಾಗಿ ಫಲಿತಾಂಶ ಪ್ರಕಟವಾಗಲು ವಿಳಂಬವಾಗಬಹುದು.
ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ, ಎಸ್.ವಿ. ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರು ನವೆಂಬರ್ 11ರಂದು ನಿವೃತ್ತರಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ತೆರವಾಗಲಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಿದೆ. ನಾಲ್ಕೂ ಕ್ಷೇತ್ರಗಳ ಫಲಿತಾಂಶವು ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R