ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹ
karnataka-heavy-rain-forecast-yellow-alert-coastal-south-interior-districts


ಬೆಂಗಳೂರು, 19 ಅಕ್ಟೋಬರ್ (ಹಿ.ಸ.):

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಚುರುಕು

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 20ರಿಂದ 22ರವರೆಗೆ ಕರಾವಳಿ ಭಾಗದಲ್ಲಿ ಮಳೆ ತೀವ್ರಗೊಳ್ಳುವ ಮುನ್ಸೂಚನೆ ಇರುವುದರಿಂದ ಯೆಲ್ಲೊ ಅಲರ್ಟ್ ಜಾರಿಗೊಳಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಬಹುದು. ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಅ.24ರವರೆಗೆ ಎಚ್ಚರಿಕೆ

ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ನಾಳೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ

ಅಕ್ಟೋಬರ್ 20ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande