ಗದಗ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ
ಗದಗ, 02 ಅಕ್ಟೋಬರ್ (ಹಿ.ಸ.): ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್
ಫೋಟೋ


ಗದಗ, 02 ಅಕ್ಟೋಬರ್ (ಹಿ.ಸ.):

ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಸಹಕಾರಿ ಮತ್ತು ಅರಣ್ಯ ಸಚಿವರಾದ ಎಸ್. ಎಸ್. ಪಾಟೀಲ್ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದು ಹೇಳಿದರು. ಪರಿಸರ ಸಂರಕ್ಷಣೆ, ಅಸ್ಪೃಶ್ಯತೆ ನಿರ್ಮೂಲನೆ, ಮಹಿಳಾ ಸ್ವಾತಂತ್ರ್ಯ ಮತ್ತು ಸಬಲೀಕರಣ, ನೈತಿಕತೆ, ರಾಜಕೀಯದಲ್ಲಿ ಮೌಲ್ಯಗಳ ಪಾಲನೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಾಂಧೀಜಿಯವರ ವಿಚಾರಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು

20ನೇ ಶತಮಾನದಲ್ಲಿ ಬಸವಣ್ಣನವರ ತತ್ವಗಳನ್ನು ಆಚರಣೆಗೆ ತಂದ ಪ್ರಮುಖ ವ್ಯಕ್ತಿಗಳಲ್ಲಿ ಮಹಾತ್ಮ ಗಾಂಧೀಜಿಯವರು ಒಬ್ಬರು ಎಂದು ಅವರು ಹೇಳಿದರು. ಗಾಂಧೀಜಿಯವರನ್ನು ದೈಹಿಕವಾಗಿ ಹತ್ಯೆ ಮಾಡಲಾಗಿದ್ದರೂ, ಅವರ ಮೌಲ್ಯಗಳು ಮತ್ತು ವಿಚಾರಗಳನ್ನು ಇಂದಿನ ಸಮಾಜದಲ್ಲಿ ಕಡೆಗಣಿಸುವ ಮೂಲಕ ವೈಚಾರಿಕವಾಗಿ ಅವರ ಚಿಂತನೆಗಳನ್ನು ಹತ್ಯೆ ಮಾಡಲಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ ಎಂದು ಅಭಿಪ್ರಾಯಪಟ್ಟರು.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ತತ್ವವನ್ನು ಆಧಾರವಾಗಿಟ್ಟುಕೊಂಡು ವಿಶ್ವವಿದ್ಯಾಲಯವು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದು ಹೇಳಿದ ಅವರು, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗೆ ವಿಶ್ವವಿದ್ಯಾಲಯವು ಪ್ರಮುಖ ಜ್ಞಾನಕೇಂದ್ರವಾಗಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ತರಬೇತಿ ನೀಡುವ ಪ್ರಮುಖ ಕೇಂದ್ರವಾಗಿ ವಿಶ್ವವಿದ್ಯಾಲಯ ರೂಪುಗೊಳ್ಳಬೇಕು ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ದೇಶಸೇವೆ ಹಾಗೂ ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿ ಹಾಗೂ ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಯುವಜನರನ್ನು ರೂಪಿಸುವುದು ವಿಶ್ವವಿದ್ಯಾಲಯದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು

ಕುಲಸಚಿವರಾದ ಪ್ರೊ. ಅಮರೇಶ್ ಯಾತಗಲ್ ಅವರು ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನಾದರ್ಶಗಳು ವಿದ್ಯಾರ್ಥಿಗಳಿಗೆ ಸದಾ ಪ್ರೇರಣೆಯಾಗಬೇಕು. ಶಿಕ್ಷಣದೊಂದಿಗೆ ಮೌಲ್ಯಗಳು, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಹಣಕಾಸು ಅಧಿಕಾರಿಗಳಾದ ಶ್ರೀ ಪ್ರಶಾಂತ್ ಜೆ. ಸಿ. ಅವರು ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿಯವರ ಸರಳ ಜೀವನ, ಪ್ರಾಮಾಣಿಕತೆ ಹಾಗೂ ದೇಶದ ಮೇಲಿನ ಬದ್ಧತೆಯನ್ನು ಸ್ಮರಿಸಿ, ಅವರ ಆದರ್ಶಗಳನ್ನು ಇಂದಿನ ಪೀಳಿಗೆ ಮುಂದುವರಿಸಬೇಕೆಂದು ತಿಳಿಸಿದರು.

ಸಬರಮತಿ ಆಶ್ರಮದ ಸಂಚಾಲಕರಾದ ಶ್ರೀ ಪ್ರಕಾಶ್ ಎಸ್. ಮಾಚೇನಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತ ಕೋರಿದರು. ಶೀ ನಿಂಗಪ್ಪ ಶಿವಬಸಣ್ಣವರ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande