
ಹುಬ್ಬಳ್ಳಿ, 02 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಮಹಾತ್ಮಾ ಗಾಂಧೀಜಿ ಅವರ ‘ಸ್ವಚ್ಛ ಭಾರತ–ಆರೋಗ್ಯವಂತ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.
‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 36, 37 ಹಾಗೂ 38ರಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛ ವಾರ್ಡ್–ಸುಂದರ ವಾರ್ಡ್’ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆರಂಭವಾದ ಸ್ವಚ್ಛ ಭಾರತ ಅಭಿಯಾನ ದೇಶಾದ್ಯಂತ ಜನಾಂದೋಲನವಾಗಿ ರೂಪುಗೊಂಡಿದೆ. ಈ ಅಭಿಯಾನವು ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುತ್ತಿದೆ ಎಂದು ಹೇಳಿದರು.
ಮನೆ, ನೆರೆಹೊರೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಮನೆಯಲ್ಲಿಯೇ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ, ಜವಾಬ್ದಾರಿಯುತವಾಗಿ ವಿಲೇವಾರಿ ಮಾಡಬೇಕು. ಸ್ವಚ್ಛ, ಸುಂದರ ಹಾಗೂ ಆರೋಗ್ಯವಂತ ಭಾರತದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ, ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ್ ಕೌಜಗೇರಿ ಸೇರಿದಂತೆ ಪೌರಕಾರ್ಮಿಕರು, ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.