ಸಾಂವಿಧಾನಿಕ ಕರ್ತವ್ಯಗಳ ನಿರ್ವಹಣೆಯಲ್ಲಿ ನಿಷ್ಪಕ್ಷಪಾತತೆ ಅಗತ್ಯ: ರಮೇಶ್ ಬಾಬು
ಸಾಂವಿಧಾನಿಕ ನೈತಿಕತೆ, ಒಕ್ಕೂಟ ವ್ಯವಸ್ಥೆ, ಸಾಮಾಜಿಕ ನ್ಯಾಯ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ರಾಜ್ಯಪಾಲ ಡಾ. ಸುಧಾ ಯಾದವ್ ಅವರಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಬಹಿರಂಗ ಪತ್ರ ಬರೆದಿದ್ದಾರೆ. ಲೋಕಭವನವನ್ನು ಜನಸಾಮಾನ್ಯರಿಗೆ ಹತ್ತಿರವಾಗಿಸುವಂತೆ ಅವರು ಆಶಿಸ
Ramesh-Babu-Calls-for-Impartial-Constitutional-Governance


ಬೆಂಗಳೂರು, 21 ಅಕ್ಟೋಬರ್ (ಹಿ.ಸ.):

ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ನಿಟ್ಟಿನಲ್ಲಿ ಸಾಂವಿಧಾನಿಕ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ತಿಳಿಸಿದ್ದಾರೆ.

ಈ ಸಂಬಂಧ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು, ರಾಜ್ಯಪಾಲರ ಅಧಿಕಾರಾವಧಿಯಲ್ಲಿ ಸಾಂವಿಧಾನಿಕ ನೈತಿಕತೆ, ಒಕ್ಕೂಟ ವ್ಯವಸ್ಥೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಹಾಗೂ ಪ್ರಜಾಸತ್ತಾತ್ಮಕ ಹೊಣೆಗಾರಿಕೆಯ ತತ್ವಗಳಿಗೆ ಆದ್ಯತೆ ದೊರೆಯಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು, ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳು, ಸಮಾಜ ಸುಧಾರಕರು, ಬುದ್ಧಿಜೀವಿಗಳು, ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು ಹಾಗೂ ನಾಗರಿಕ ಸಮಾಜದ ವಿವಿಧ ಗುಂಪುಗಳು ತಮ್ಮ ಅಭಿಪ್ರಾಯಗಳನ್ನು ಲೋಕಭವನದೊಂದಿಗೆ ಹಂಚಿಕೊಳ್ಳಲು ಸೂಕ್ತ ಅವಕಾಶ ಕಲ್ಪಿಸಬೇಕು. ಇದರಿಂದ ಸಂವಾದ, ಪರಸ್ಪರ ತಿಳಿವಳಿಕೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬಲಪಡಿಸುವ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಎಲ್ಲ ಸಮುದಾಯಗಳ ಭಾಷೆ ಮತ್ತು ಸಂಪ್ರದಾಯಗಳಿಗೆ ಗೌರವ ನೀಡುವುದರ ಜತೆಗೆ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉತ್ತೇಜಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕು. ಇಂತಹ ಕ್ರಮಗಳು ರಾಜ್ಯದ ಸಾಮೂಹಿಕ ಅಸ್ಮಿತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸಲಿವೆ ಎಂದು ರಮೇಶ್ ಬಾಬು ಹೇಳಿದ್ದಾರೆ.

ಅಲ್ಲದೆ, ಸಾಂವಿಧಾನಿಕ ಸಾಕ್ಷರತೆ, ಶಿಕ್ಷಣ, ವೈಜ್ಞಾನಿಕ ಮನೋಭಾವ, ಮಹಿಳಾ ಸಬಲೀಕರಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಲೋಕಭವನ ನಿರಂತರ ಪ್ರೋತ್ಸಾಹ ನೀಡುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳ ನಡುವೆ ಪರಸ್ಪರ ಗೌರವದ ವಾತಾವರಣ ನಿರ್ಮಿಸುವುದು, ವಿವಿಧ ಸಮುದಾಯಗಳ ನಡುವೆ ಸಾಮರಸ್ಯ ಬೆಳೆಸುವುದು ಹಾಗೂ ಲೋಕಭವನವನ್ನು ಸಾಮಾನ್ಯ ನಾಗರಿಕರಿಗೆ ಇನ್ನಷ್ಟು ಹತ್ತಿರವಾಗಿಸುವ ಉಪಕ್ರಮಗಳನ್ನು ಉತ್ತೇಜಿಸುವಲ್ಲಿ ರಾಜ್ಯಪಾಲರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಮ್ಮ ಬಹಿರಂಗ ಪತ್ರದಲ್ಲಿ ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande