
ನವದೆಹಲಿ, 21 ಅಕ್ಟೋಬರ್ (ಹಿ.ಸ.):
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ವರು ಅಮಾಯಕ ನಾಗರಿಕರ ಹತ್ಯೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಹಿಂಸಾಚಾರಕ್ಕೆ ಬಿಜೆಪಿ ಆಡಳಿತದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಅವರು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಖರ್ಗೆ, 2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ 300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 24,530 ಮಂದಿ ಶೋಚನೀಯ ಪರಿಸ್ಥಿತಿಯಲ್ಲಿ ಪರಿಹಾರ ಶಿಬಿರಗಳಲ್ಲಿ ವಾಸಿಸುವಂತಾಗಿದೆ. ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವರ್ಗದ ಕುಟುಂಬಗಳು ದೀರ್ಘಕಾಲದ ಹಿಂಸಾಚಾರದ ಪರಿಣಾಮಗಳನ್ನು ಎದುರಿಸುತ್ತಿವೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದು, ಮುಖ್ಯಮಂತ್ರಿಯನ್ನು ಬದಲಿಸುವುದು ಹಾಗೂ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಸೇರಿದಂತೆ ಬಿಜೆಪಿಯ ರಾಜಕೀಯ ನಡೆಗಳಿಂದ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.
ಹಿಂಸಾಚಾರ ಆರಂಭವಾದ ಬಳಿಕ ಸುಮಾರು 29 ತಿಂಗಳ ಕಾಲ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತಿನಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.
ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ ಗಡಿ ರಾಜ್ಯವಾಗಿರುವ ಮಣಿಪುರದಲ್ಲಿ ನಿರಂತರವಾಗಿ ನಡೆಯುತ್ತಿರುವ ರಕ್ತಪಾತವು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವಲ್ಲಿ ಹಾಗೂ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸುವಲ್ಲಿ ಬಿಜೆಪಿ ಸರ್ಕಾರದ ವೈಫಲ್ಯವನ್ನು ಎತ್ತಿತೋರಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾಗೆ ಮೂರು ಪ್ರಶ್ನೆ
ಮಣಿಪುರದ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮೂರು ಪ್ರಶ್ನೆಗಳನ್ನು ಕೇಳಿರುವ ಖರ್ಗೆ, 2023ರ ಜೂನ್ನಲ್ಲಿ ಅಮಿತ್ ಶಾ ರಚಿಸಿದ್ದ ಶಾಂತಿ ಸಮಿತಿಯ ಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು, ನಾಗರಿಕರನ್ನು ರಕ್ಷಿಸಲು ಮತ್ತು ಗಡಿ ರಾಜ್ಯದ ಭದ್ರತಾ ಸವಾಲುಗಳನ್ನು ಎದುರಿಸಲು ಇದುವರೆಗೆ ಕೈಗೊಂಡಿರುವ ನಿರ್ದಿಷ್ಟ ಕ್ರಮಗಳೇನು ಎಂದು ಉತ್ತರಿಸುವಂತೆ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯ ಶಿಫಾರಸುಗಳ ಕುರಿತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಪರಿಹಾರ ಶಿಬಿರಗಳಲ್ಲಿ 31 ಅಸ್ವಾಭಾವಿಕ ಸಾವುಗಳು ಸಂಭವಿಸಿರುವುದನ್ನು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿದ್ದರೂ, ಸಾವಿರಾರು ಜನರು ಇನ್ನೂ ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಮಹಿಳೆಯರು, ಮಕ್ಕಳು ಮತ್ತು ಸ್ಥಳಾಂತರಗೊಂಡ ಕುಟುಂಬಗಳ ಸುರಕ್ಷತೆ, ಘನತೆ ಹಾಗೂ ಪುನರ್ವಸತಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ.
300ಕ್ಕೂ ಹೆಚ್ಚು ಸಾವುಗಳು ಸಂಭವಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಂಡು, ಮುಖ್ಯಮಂತ್ರಿಯನ್ನೂ ಬದಲಿಸಿದ ಬಳಿಕವೂ ಆಡಳಿತದ ಈ ವೈಫಲ್ಯಕ್ಕೆ ಯಾರು ಹೊಣೆ ಹೊರುತ್ತಾರೆ? ಪ್ರಧಾನಿ ಮತ್ತು ಗೃಹ ಸಚಿವರು ಕ್ರಮ ಕೈಗೊಳ್ಳುವ ಮೊದಲು ಇನ್ನೆಷ್ಟು ಅಮಾಯಕರು ಪ್ರಾಣ ಕಳೆದುಕೊಳ್ಳಬೇಕು ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಮಣಿಪುರಕ್ಕೆ ನ್ಯಾಯ, ಘನತೆ, ಸಂವಿಧಾನಬದ್ಧ ಹಕ್ಕುಗಳು ಮತ್ತು ಶಾಶ್ವತ ಶಾಂತಿ ದೊರೆಯಬೇಕು. ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ ಗಡಿ ರಾಜ್ಯದ ಭದ್ರತೆ ಮತ್ತು ಸ್ಥಿರತೆಯನ್ನು ಬಿಜೆಪಿಯ ರಾಜಕೀಯ ಹಿತಾಸಕ್ತಿಗಳಿಗೆ ಬಲಿಯಾಗಲು ಬಿಡಬಾರದು ಎಂದು ಅವರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.