
ಬಳ್ಳಾರಿ, 24 ಅಕ್ಟೋಬರ್ (ಹಿ.ಸ.)
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿರುವ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ಬಳ್ಳಾರಿ ನಗರದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಚೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 24 ರಿಂದ 27 ರವರೆಗೆ ಸಮಾಜ ಕಲ್ಯಾಣ ಇಲಾಖೆ, ಇಎಸ್ಐಸಿ ವೈದ್ಯಕೀಯ ಸೇವೆಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ ಹುದ್ದೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳು ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ನಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆ / ಇಂಟರ್ನೆಟ್ ಸೆಂಟರ್ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ನಿಯಮಗಳು ಪರೀಕ್ಷಾ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್