
ಧಾರವಾಡ, 24 ಅಕ್ಟೋಬರ್ (ಹಿ.ಸ.):
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ವಿಶ್ವಾಸ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಸೂಚಿಸಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶನಿವಾರ ಮತ ಎಣಿಕೆ ಮೇಲ್ವಿಚಾರಕರು ಮತ್ತು ಎಣಿಕೆ ಸಹಾಯಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಸುತ್ತಿನಿಂದಲೇ ಪಾರದರ್ಶಕತೆ ಕಾಯ್ದುಕೊಂಡರೆ ಮುಂದಿನ ಸುತ್ತುಗಳ ಮತ ಎಣಿಕೆಯೂ ಸುಗಮವಾಗಿ ನಡೆಯಲಿದೆ ಎಂದರು.
ಮತ ಎಣಿಕೆ ಸಿಬ್ಬಂದಿ ತರಬೇತಿಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಾಯೋಗಿಕ ತರಬೇತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಎಲ್ಲ ಅನುಮಾನಗಳನ್ನು ಪರಿಹರಿಸಿಕೊಂಡು, ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಿಬ್ಬಂದಿ ಚುನಾವಣಾಧಿಕಾರಿಯ ಪ್ರತಿನಿಧಿಗಳೆಂಬ ಜವಾಬ್ದಾರಿಯಿಂದ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಮತ ಎಣಿಕೆ ಪೂರ್ಣಗೊಳ್ಳುವವರೆಗೆ ಕರ್ತವ್ಯಕ್ಕೆ ಆದ್ಯತೆ ನೀಡಬೇಕು. ಅತಿಯಾದ ಆತ್ಮವಿಶ್ವಾಸದಿಂದ ಸ್ವಯಂ ನಿರ್ಧಾರ ಕೈಗೊಳ್ಳದೆ, ಪ್ರತಿಯೊಂದು ಹಂತವನ್ನೂ ನಿಯಮಾನುಸಾರ ನಿರ್ವಹಿಸಬೇಕು ಎಂದು ಸೂಚಿಸಿದರು.
ನಿವೃತ್ತ ತಹಸೀಲ್ದಾರ್ ಶಿರಗಾಂವ್ಕರ್ ತರಬೇತಿ ನೀಡಿದರು. ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಸೇರಿದಂತೆ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ಹಾಗೂ ಮತ ಎಣಿಕೆ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.