
ಬೆಂಗಳೂರು, 25 ಅಕ್ಟೋಬರ್ (ಹಿ.ಸ.):
ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಸೂಚನೆಯನ್ನು ಮೀರಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ ಆರ್.ಎಸ್.ಎಸ್ ಪಥಸಂಚಲನ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಅನುಮತಿ ನೀಡಲಾಗಿತ್ತು. ಈ ಬಾರಿಯೂ ಅರ್ಜಿ ಸಲ್ಲಿಸಿದರೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಕಾರ್ಯಕ್ರಮ ಕೇವಲ ಒಂದು ಗಂಟೆ ನಡೆಯಲಿದೆ ಎಂದು ತಿಳಿಸಲಾಗಿತ್ತು. ಹಿಂದಿನ ಬಾರಿ ಯಾವುದೇ ದೂರುಗಳು ಬಂದಿರದ ಕಾರಣ ಅನುಮತಿ ನೀಡಬಹುದು ಎಂದು ಹೇಳಿದ್ದೆ ಎಂದರು.
ಆದರೆ, ಪ್ರಸ್ತುತ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅನುಮತಿ ನೀಡಬಾರದು ಎಂದು ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಆಯೋಗದ ನಿರ್ದೇಶನವನ್ನು ಉಲ್ಲಂಘಿಸಿ ಜಿಲ್ಲಾ ಆಡಳಿತ ಅನುಮತಿ ನೀಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.
ತಾವು ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಸೂಚಿಸಿದ್ದೆನೇ ಹೊರತು ಯಾವುದೇ ವಿವಾದ ಸೃಷ್ಟಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.