
ಬೆಂಗಳೂರು, 25 ಅಕ್ಟೋಬರ್ (ಹಿ.ಸ.):
ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆಯುಳ್ಳವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ಗುರುತಿಸಿದೆ. ಕನ್ನಡಿಗರ ಪ್ರತಿಭೆ, ಕೌಶಲ ಮತ್ತು ಸಾಮರ್ಥ್ಯದ ಬಗ್ಗೆ ಸರ್ಕಾರಕ್ಕೆ ಅಪಾರ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.
ಯಾವುದೇ ಖಾಸಗಿ ಸಂಸ್ಥೆಯು ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ಕಡೆಗಣಿಸಿರುವುದು ಕಂಡುಬಂದರೆ, ಅಂತಹ ಪ್ರಕರಣಗಳಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.