ಮೋದಿ ವಿರುದ್ಧ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಆಗ್ರಹ
ಬೆಂಗಳೂರು, 26 ಅಕ್ಟೋಬರ್ (ಹಿ.ಸ.): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ನಗರದ ಫ್ರೀಡಂ ಪಾರ್ಕ್ನಲ್ಲಿ
bjp-protest-against-mallikarjun-kharge-remarks-on-pm-modi


ಬೆಂಗಳೂರು, 26 ಅಕ್ಟೋಬರ್ (ಹಿ.ಸ.):

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅಶ್ವತ್ಥ್ ನಾರಾಯಣ, ಸಿ.ಕೆ. ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದ ಆರ್. ಅಶೋಕ್, ಮಲ್ಲಿಕಾರ್ಜುನ ಖರ್ಗೆ ಬಳಸಿರುವ ಪದಗಳು ಕಾಂಗ್ರೆಸ್ನ ರಾಜಕೀಯ ಸಂಸ್ಕೃತಿಯ ಅಧಃಪತನಕ್ಕೆ ಸಾಕ್ಷಿಯಾಗಿವೆ ಎಂದು ಟೀಕಿಸಿದರು.

ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರ ಕುಟುಂಬದ ಬಗ್ಗೆಯೇ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ತನ್ನ ಹತಾಶ ಮನಸ್ಥಿತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ. ವಿಚಾರಗಳ ಮೂಲಕ ರಾಜಕೀಯ ಎದುರಿಸುವ ಶಕ್ತಿಯನ್ನು ಕಳೆದುಕೊಂಡಿರುವ ಕಾಂಗ್ರೆಸ್ ವೈಯಕ್ತಿಕ ನಿಂದನೆಗೆ ಇಳಿದಿರುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ಇಂತಹ ಅಸಂಸ್ಕೃತ ರಾಜಕಾರಣಕ್ಕೆ ದೇಶದ ಜನತೆ ಎಂದಿಗೂ ಮನ್ನಣೆ ನೀಡುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ಗೆ ಸಮರ್ಥ ನಾಯಕತ್ವದ ಕೊರತೆ: ಛಲವಾದಿ ನಾರಾಯಣಸ್ವಾಮಿ

ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಬಳಿಕ ನಾಯಕರ ಮಾತುಗಳಿಗೆ ಇತಿಮಿತಿ ಇಲ್ಲದಂತಾಗಿದೆ ಎಂದು ಟೀಕಿಸಿದರು.

“ಕಳಪೆ ನಾಯಕತ್ವವಿದ್ದರೆ ವ್ಯವಸ್ಥೆಯೂ ಕಳಪೆಯಾಗಿರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ಅಧ್ಯಕ್ಷರಾದಾಗ ನಮ್ಮ ರಾಜ್ಯದ ನಾಯಕರು ಎಂಬ ಹೆಮ್ಮೆಯಿಂದ ಸಂತೋಷಪಟ್ಟಿದ್ದೆವು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಗಳಲ್ಲಿ ದೊರೆಯುತ್ತಿರುವ ಗೌರವವನ್ನು ಸಹಿಸಿಕೊಳ್ಳಲು ಕಾಂಗ್ರೆಸ್ಗೆ ಸಾಧ್ಯವಾಗುತ್ತಿಲ್ಲವೇ?” ಎಂದು ಪ್ರಶ್ನಿಸಿದರು.

ದೇಶದಲ್ಲಿ ಕಾಂಗ್ರೆಸ್ಗೆ ಸಮರ್ಥ ನಾಯಕತ್ವದ ಕೊರತೆಯಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಗೆ ಗಮನಹರಿಸುವ ಬದಲು ಅನಗತ್ಯ ವಿವಾದಗಳಲ್ಲಿ ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಆರ್ಎಸ್ಎಸ್ ಮತ್ತು ಬಿಜೆಪಿ ಅಪ್ಪಟ ಭಾರತೀಯ ಸಂಘಟನೆಗಳಾಗಿದ್ದು, ಕಾಂಗ್ರೆಸ್ನ ನಾಯಕತ್ವದ ಕುರಿತು ಟೀಕೆಗಳನ್ನು ಮಾಡಿದರು.

ಖರ್ಗೆ ತಕ್ಷಣ ಕ್ಷಮೆಯಾಚಿಸಲಿ: ಅಶ್ವತ್ಥ್ ನಾರಾಯಣ

ಶಾಸಕ ಅಶ್ವತ್ಥ್ ನಾರಾಯಣ ಮಾತನಾಡಿ, “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎಂಬಂತಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆಯೇ? ಎಸ್ಐಆರ್ನಲ್ಲಿ ಏನು ತಪ್ಪಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಲಿ” ಎಂದು ಸವಾಲು ಹಾಕಿದರು.

ಸನಾತನ ಧರ್ಮ ಮತ್ತು ರಾಮಮಂದಿರದ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಗೆ ಗೌರವವಿಲ್ಲ ಎಂದು ಆರೋಪಿಸಿದ ಅವರು, ಇಂತಹ ವಿಷಯಗಳ ಬಗ್ಗೆ ಮಾತನಾಡುವ ಬದಲು ವೈಯಕ್ತಿಕ ನಿಂದನೆಗೆ ಇಳಿಯುವುದು ಸರಿಯಲ್ಲ ಎಂದರು.

“ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಕಾಂಗ್ರೆಸ್ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳಿಂದ ನಮಗೆ ನೋವಾಗಿದೆ. ಅವರಂತೆ ನಾವು ಕೀಳುಮಟ್ಟದ ಭಾಷೆ ಬಳಸುವುದಿಲ್ಲ. ಅವರು ತಕ್ಷಣ ಕ್ಷಮೆಯಾಚಿಸಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ” ಎಂದು ಆಗ್ರಹಿಸಿದರು.

ಖರ್ಗೆ ಅವರ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande