ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸೌಹಾರ್ದಯುತ ಚರ್ಚೆ ಮೂಲಕ ಸಮಸ್ಯೆ ಪರಿಹಾರಕ್ಕೆ ಡಿ.ಕೆ. ಶಿವಕುಮಾರ್ ಕರೆ
ಬೆಳಗಾವಿ, 26 ಅಕ್ಟೋಬರ್ (ಹಿ.ಸ.): ಕಳೆದ ಹತ್ತು ವರ್ಷಗಳಿಂದ ಸಕ್ಕರೆ ಬೆಲೆಯಲ್ಲಿ ಏರಿಕೆಯಾಗದ ಹಿನ್ನೆಲೆಯಲ್ಲಿ ರೈತರಿಗೆ ನಷ್ಟ ಹೆಚ್ಚಾಗಿದೆ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ₹6 ಸಾವಿರದವರೆಗೆ ಬೆಲೆ ನಿಗದಿಪಡಿಸಿ ಪರಿಹಾರ ನೀಡುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲಿಕರು ಜೊತೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಭೆ ಆರಂಭ


ಬೆಳಗಾವಿ, 26 ಅಕ್ಟೋಬರ್ (ಹಿ.ಸ.):

ಕಳೆದ ಹತ್ತು ವರ್ಷಗಳಿಂದ ಸಕ್ಕರೆ ಬೆಲೆಯಲ್ಲಿ ಏರಿಕೆಯಾಗದ ಹಿನ್ನೆಲೆಯಲ್ಲಿ ರೈತರಿಗೆ ನಷ್ಟ ಹೆಚ್ಚಾಗಿದೆ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ₹6 ಸಾವಿರದವರೆಗೆ ಬೆಲೆ ನಿಗದಿಪಡಿಸಿ ಪರಿಹಾರ ನೀಡುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ರೈತರು ಮತ್ತು ಕಾರ್ಖಾನೆಗಳ ಮಾಲೀಕರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಸಮಸ್ಯೆಗೆ ಸೌಹಾರ್ದಯುತ ಚರ್ಚೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಈ ಹಿಂದೆ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಕೆಲವು ತೀರ್ಮಾನಗಳನ್ನು ಕೈಗೊಂಡಿತ್ತು. ಸರ್ಕಾರ ಒಂದು ಭಾಗದ ಹಣ ನೀಡುವುದು, ಉಳಿದ ಮೊತ್ತವನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರು ಭರಿಸುವುದು ಎಂದು ನಿರ್ಧರಿಸಲಾಗಿತ್ತು. ಶೇ.80ರಷ್ಟು ಕಾರ್ಖಾನೆಗಳು ಈ ತೀರ್ಮಾನವನ್ನು ಪಾಲಿಸಿವೆ. ಕೆಲವು ಕಾರ್ಖಾನೆಗಳು ಪಾಲಿಸದೆ ನ್ಯಾಯಾಲಯದ ಮೆಟ್ಟಿಲೇರಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕಾರ್ಖಾನೆಗಳ ಮಾಲೀಕರು ಯಶಸ್ವಿಯಾಗಿಲ್ಲ. ರೈತರು ಮತ್ತು ಕಾರ್ಖಾನೆಗಳ ಮಾಲೀಕರು ಇಬ್ಬರನ್ನೂ ರಕ್ಷಿಸುವ ಹೊಣೆ ಸರ್ಕಾರದ ಮೇಲಿದೆ. ಕಾರ್ಖಾನೆಗಳಿಲ್ಲದಿದ್ದರೆ ರೈತರಿಗೆ ತೊಂದರೆಯಾಗುತ್ತದೆ; ರೈತರಿಲ್ಲದಿದ್ದರೆ ಕಾರ್ಖಾನೆಗಳಿಗೂ ಸಮಸ್ಯೆಯಾಗುತ್ತದೆ. ಹೀಗಾಗಿ ಎಲ್ಲರ ಹಿತ ಕಾಪಾಡುವುದು ಅಗತ್ಯ ಎಂದು ಹೇಳಿದರು.

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ತಾವು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಕಿತ್ತೂರಿನಲ್ಲಿ ರೈತರನ್ನು ಭೇಟಿ ಮಾಡಿ ಅವರ ಅಹವಾಲು ಆಲಿಸಿದ್ದೇವೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಮಯಾವಕಾಶ ಕೇಳಿದ್ದೆ. ಇದೀಗ ಇಡೀ ಸರ್ಕಾರವೇ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಚರ್ಚಿಸಲು ಬಂದಿದೆ ಎಂದರು.

ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಹಣಕಾಸು, ಬ್ಯಾಂಕ್ ಸಾಲ, ಎಥನಾಲ್ ಹಾಗೂ ವಿದ್ಯುತ್ ದರ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಎಲ್ಲ ವಿಚಾರಗಳನ್ನು ಪರಿಗಣಿಸದೆ ಒಬ್ಬರೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ರೈತರ ಬೇಡಿಕೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ತಮ್ಮ ಸಮಸ್ಯೆಗಳನ್ನು ತಿಳಿಸಿ, ಸೂಕ್ತ ಸಲಹೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ರಾಷ್ಟ್ರಮಟ್ಟದಲ್ಲಿ ತೀರ್ಮಾನ ಅಗತ್ಯ

ಕರ್ನಾಟಕ ಮಾತ್ರವಲ್ಲದೆ ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಬಿಹಾರ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಬ್ಬು ಬೆಲೆ ಸಮಸ್ಯೆ ಇದೆ. ಸಕ್ಕರೆ ಬೆಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಏರಿಕೆಯಾಗಿಲ್ಲ. ಇದೇ ವೇಳೆ ಸಕ್ಕರೆ ಉತ್ಪಾದನೆಯೂ ಕುಸಿದಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಲವು ಅಂಶಗಳು ಈ ಸಮಸ್ಯೆಗೆ ಕಾರಣವಾಗಿವೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚಿಸಿದ್ದೇನೆ. ರಾಜ್ಯದ ರೈತರ ಸಮಸ್ಯೆಯಾಗಿರುವುದರಿಂದ ಅವರು ಕೂಡ ಗಮನ ಹರಿಸಿದ್ದಾರೆ. ಇದು ದೇಶದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಾದ ವಿಚಾರವಾಗಿದ್ದು, ರಾಷ್ಟ್ರಮಟ್ಟದಲ್ಲಿ ತೀರ್ಮಾನ ಕೈಗೊಳ್ಳುವ ಅಗತ್ಯವಿದೆ ಎಂದರು.

ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿದ್ದು, ಸಮಸ್ಯೆಯನ್ನು ಬಗೆಹರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರೈತರಿಗೆ ಪರಿಹಾರ ಒದಗಿಸುವ ಜವಾಬ್ದಾರಿ ಸಕ್ಕರೆ ಕಾರ್ಖಾನೆಗಳ ಮಾಲೀಕರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮೇಲಿದೆ ಎಂದು ತಿಳಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ಗಾಗಿ ₹32 ಸಾವಿರ ಕೋಟಿ

ರಾಜ್ಯದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲು ಸರ್ಕಾರ ವಾರ್ಷಿಕವಾಗಿ ₹20 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಈ ವರ್ಷ ₹32 ಸಾವಿರ ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ. ಮಳೆ ಕೊರತೆಯಿಂದಾಗಿ ರೈತರು ಹೆಚ್ಚು ವಿದ್ಯುತ್ ಬಳಸುತ್ತಿದ್ದು, ಕಬ್ಬಿನ ಇಳುವರಿಯೂ ಕಡಿಮೆಯಾಗಿದೆ ಎಂದು ವಿವರಿಸಿದರು.

ಶಾಸಕರು ಮತ್ತು ಸಂಸದರಿಗೆ ತಮ್ಮದೇ ಆದ ಒತ್ತಡಗಳಿರುತ್ತವೆ. ಆದರೆ ಈ ಸಭೆ ರಾಜಕೀಯ ಮಾಡುವ ವೇದಿಕೆಯಲ್ಲ. ರಾಜಕೀಯ ಚರ್ಚೆಗಳಿಗೆ ಬೇರೆ ವೇದಿಕೆಗಳಿವೆ. ರಾಜ್ಯದಲ್ಲಿ ಶಾಂತಿ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ರೈತರು ಮತ್ತು ಕಾರ್ಖಾನೆಗಳ ಮಾಲೀಕರ ಬದುಕು ಎರಡೂ ಮುಖ್ಯ. ಎಲ್ಲರ ಸಮಸ್ಯೆಗಳನ್ನು ಆಲಿಸಿ ಒಮ್ಮತದ ಪರಿಹಾರ ಕಂಡುಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande