
ಬೆಂಗಳೂರು, 27 ಅಕ್ಟೋಬರ್ (ಹಿ.ಸ.):
ರಾಜ್ಯದಲ್ಲಿ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಪ್ರವಾಸದಲ್ಲಿದ್ದ ಕಾರಣ ಈ ಕುರಿತು ಅವರೊಂದಿಗೆ ಚರ್ಚಿಸಲು ಸಾಧ್ಯವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿಯೊಂದಿಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಇದೇ ವೇಳೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿ ಅವರು ಸೋಮವಾರ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಒಮ್ಮತ ಮೂಡಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಆದರೆ, ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೂ ಕೆಲವು ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಆದರೂ ರಾಜ್ಯ ಸರ್ಕಾರದ ವತಿಯಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.