
ಮೈಸೂರು, 28 ಅಕ್ಟೋಬರ್ (ಹಿ.ಸ.):
ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳ ನಿಚ್ಚಳ ಗೆಲುವು ಪಕ್ಷದ ಬೆನ್ನೆಲುಬಾಗಿರುವ ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮದ ಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಮೈಸೂರಿನ ಪಕ್ಷದ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ರಾಜ್ಯದ ಶಿಕ್ಷಕರು ಮತ್ತು ಪದವೀಧರ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವಾಸವಿಟ್ಟು, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಚುನಾವಣೆಯಲ್ಲಿ ಎನ್ಡಿಎ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹಾಗೂ ಗೆಲುವು ಸಾಧಿಸಿದ ನಾಲ್ವರು ಎನ್ಡಿಎ ಅಭ್ಯರ್ಥಿಗಳಿಗೂ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ, ಮಾಜಿ ಶಾಸಕರಾದ ನಿರಂಜನಕುಮಾರ್ ಮತ್ತು ಹರ್ಷವರ್ಧನ್, ಬಿಜೆಪಿ ಮೈಸೂರು ವಿಭಾಗದ ಪ್ರಭಾರಿ ಸ್ವಾಮಿ ಮರಳಾಪುರ, ರಾಜ್ಯ ಉಪಾಧ್ಯಕ್ಷರಾದ ಎನ್. ಮಹೇಶ್ ಮತ್ತು ರಾಜೇಂದ್ರ, ನಗರಾಧ್ಯಕ್ಷ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕುಮರಳ್ಳಿ ಸುಬ್ಬಣ್ಣ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.