
ಮಂಡ್ಯ, 29 ಅಕ್ಟೋಬರ್ (ಹಿ.ಸ.):
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 31ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಸುಮಾರು ₹2,000 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದ ಸಿದ್ಧತೆಗಳನ್ನು ಕೈಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಯೋಜಿಸಿದ್ದಾರೆ. ಈಗಾಗಲೇ ಮಂಡ್ಯ ನಗರದಲ್ಲಿ ಕಾಂಗ್ರೆಸ್ ನಾಯಕರ ಕಟೌಟ್ಗಳು ಹಾಗೂ ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗಾಗಿ ಜಾಗ ಮಂಜೂರು ಮಾಡುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಮಂಡ್ಯ ಭೇಟಿ ಮಹತ್ವ ಪಡೆದುಕೊಂಡಿದೆ.
ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ರಾಜಕೀಯ ಚರ್ಚೆಗೆ ಈ ಬೆಳವಣಿಗೆ ಕಾರಣವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದರ ಜತೆಗೆ, ಅಭಿವೃದ್ಧಿ ಕಾಮಗಾರಿಗಳ ಮೂಲಕ ರಾಜಕೀಯವಾಗಿ ಸಂದೇಶ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R