
ಬೆಂಗಳೂರು, 29 ಅಕ್ಟೋಬರ್ (ಹಿ.ಸ.):
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 12 ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಿರ್ಣಯಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡದ ಅವಧಿ ವಿಸ್ತರಣೆ, ಸರ್ಕಾರಿ ಆಸ್ಪತ್ರೆಗಳಿಗೆ ಪ್ರಯೋಗಾಲಯ ಉಪಕರಣಗಳ ಖರೀದಿ ಹಾಗೂ ಹುಬ್ಬಳ್ಳಿಯಲ್ಲಿ ಸಮಗ್ರ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಹಲವು ಪ್ರಸ್ತಾವನೆಗಳಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಮಹಿಳೆಯರಿಗೆ ₹16.04 ಕೋಟಿ ವೆಚ್ಚದಲ್ಲಿ 9,243 ಹೊಲಿಗೆ ಯಂತ್ರಗಳನ್ನು ವಿತರಿಸಲು ಅನುಮೋದನೆ ನೀಡಲಾಗಿದೆ. ಸಂಗೊಳ್ಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ₹228.95 ಕೋಟಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗನಿರ್ಣಯ ಸೇವೆಗಳನ್ನು ಬಲಪಡಿಸಲು ₹21.11 ಕೋಟಿ ವೆಚ್ಚದಲ್ಲಿ ಪ್ರಯೋಗಾಲಯ ಉಪಕರಣಗಳನ್ನು ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ.
ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ಮುಂದುವರಿಸಲು ವಿಶೇಷ ತನಿಖಾ ತಂಡದ ಕಾರ್ಯಾವಧಿಯನ್ನು 2026ರ ಜುಲೈ 1ರಿಂದ ಒಂದು ವರ್ಷದ ಅವಧಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಹುಬ್ಬಳ್ಳಿಯಲ್ಲಿ 14.6 ಎಕರೆ ಪ್ರದೇಶದಲ್ಲಿ ಸಮಗ್ರ ಕ್ರೀಡಾಂಗಣ ನಿರ್ಮಿಸಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ 20 ವರ್ಷಗಳ ಕಾಲ ನಿರ್ವಹಿಸಲು ಉದ್ದೇಶಿಸಲಾಗಿದೆ.
ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಫುಟ್ಬಾಲ್, ಬ್ಯಾಸ್ಕೆಟ್ಬಾಲ್, ವಾಲಿಬಾಲ್, ಹಾಕಿ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಗತ್ಯವಾದ ಸೌಲಭ್ಯಗಳ ಜತೆಗೆ ಈಜುಕೊಳ, ವ್ಯಾಯಾಮಶಾಲೆ, ಕುದುರೆ ಸವಾರಿ ತರಬೇತಿ ಕೇಂದ್ರ ಮತ್ತು ಕ್ರೀಡಾಪಟುಗಳ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಬೆಂಗಳೂರಿನ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಸುಧಾರಿಸಲು ₹61.50 ಕೋಟಿ ವೆಚ್ಚದಲ್ಲಿ ಕಾವಲ್ಬೈರಸಂದ್ರದಲ್ಲಿ 50 ದಶಲಕ್ಷ ಲೀಟರ್ ಹಾಗೂ ಬನಶಂಕರಿಯಲ್ಲಿ 22 ದಶಲಕ್ಷ ಲೀಟರ್ ಸಾಮರ್ಥ್ಯದ ಎರಡು ಜಲಸಂಗ್ರಹಾಗಾರಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಕಾವಲ್ಬೈರಸಂದ್ರದ ಜಲಸಂಗ್ರಹಾಗಾರದಿಂದ ಸುಮಾರು 72 ಸಾವಿರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವೈಜ್ಞಾನಿಕ ನಗರ ಯೋಜನೆ ರೂಪಿಸಲು ₹16.60 ಕೋಟಿ ವೆಚ್ಚದಲ್ಲಿ ಭೌಗೋಳಿಕ ಮಾಹಿತಿ ವ್ಯವಸ್ಥೆ ಆಧಾರಿತ ಮಹಾಯೋಜನೆ ಸಿದ್ಧಪಡಿಸಲು ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರಿನ ಚರಕನಹಳ್ಳಿಯಲ್ಲಿ ₹51.37 ಕೋಟಿ ವೆಚ್ಚದಲ್ಲಿ ಪ್ರತಿದಿನ 10 ದಶಲಕ್ಷ ಲೀಟರ್ ತ್ಯಾಜ್ಯನೀರನ್ನು ಸಂಸ್ಕರಿಸುವ ಘಟಕ ನಿರ್ಮಾಣಕ್ಕೂ ಅನುಮೋದನೆ ದೊರೆತಿದೆ.
ಸುಮಾರು 40 ವರ್ಷಗಳಷ್ಟು ಹಳೆಯದಾದ ಕರ್ನಾಟಕ ಲೋಕಾಯುಕ್ತದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸುವ ಪ್ರಸ್ತಾವನೆಗೂ ಸಂಪುಟ ಒಪ್ಪಿಗೆ ನೀಡಿದೆ. ಹೊಸ ನಿಯಮಗಳ ಮೂಲಕ ನೇಮಕಾತಿ ಪ್ರಕ್ರಿಯೆ ಮತ್ತು ಸೇವಾ ನಿರ್ವಹಣೆಯಲ್ಲಿ ಸುಧಾರಣೆ ತರಲು ಉದ್ದೇಶಿಸಲಾಗಿದೆ.
ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಫಲಿತಾಂಶಗಳ ಮೇಲ್ವಿಚಾರಣೆಗಾಗಿ ₹14 ಕೋಟಿ ವೆಚ್ಚದಲ್ಲಿ ‘ಕೆ-ಮಾನಿಟರ್’ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಎರಡು ಹಂತಗಳಲ್ಲಿ ಸಮೀಕ್ಷೆ ನಡೆಸಿ, ಮೊದಲ ಹಂತದಲ್ಲಿ ಒಂದು ಲಕ್ಷ ಹಾಗೂ ಎರಡನೇ ಹಂತದಲ್ಲಿ 60 ಸಾವಿರ ಯೋಜನೆಗಳು ಅಥವಾ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಗುತ್ತದೆ.
ಎಂಟು ತಿಂಗಳ ಅವಧಿಯಲ್ಲಿ ಸಮೀಕ್ಷೆ ನಡೆಸಿ, ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕ್ರಮ ಕೈಗೊಳ್ಳುವುದು ಯೋಜನೆಯ ಉದ್ದೇಶವಾಗಿದೆ.
ಆದಿವಾಸಿ ಹಾಗೂ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಂಪುಟ ಅನುಮೋದನೆ ನೀಡಿದೆ. ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ ಮತ್ತು ಸಿದ್ಧಿ ಸೇರಿದಂತೆ ವಿವಿಧ ಬುಡಕಟ್ಟು ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೆರವಾಗಲು ₹33.36 ಕೋಟಿ ಅನುದಾನ ಒದಗಿಸಲು ಒಪ್ಪಿಗೆ ನೀಡಲಾಗಿದೆ.
ಇದಲ್ಲದೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಘನ, ದ್ರವ, ಅಪಾಯಕಾರಿ, ವಿದ್ಯುನ್ಮಾನ, ನಿರ್ಮಾಣ ಹಾಗೂ ಜೈವಿಕ ವೈದ್ಯಕೀಯ ತ್ಯಾಜ್ಯಗಳ ವೈಜ್ಞಾನಿಕ ಸಂಗ್ರಹ, ಸಂಸ್ಕರಣೆ ಮತ್ತು ವಿಲೇವಾರಿ ವ್ಯವಸ್ಥೆ ಸುಧಾರಿಸಲು ಮುಂದಿನ ಐದು ವರ್ಷಗಳ ಅವಧಿಗೆ ₹1,494.70 ಕೋಟಿ ವೆಚ್ಚದ ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R