
ಬಾಗಲಕೋಟೆ, 03 ಅಕ್ಟೋಬರ್ (ಹಿ.ಸ.)
ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಚಿಮ್ಮಡ ಗ್ರಾಮದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರು ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿದ್ದು ಸವದಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಭಿವೃದ್ಧಿಯ ಜೊತೆಗೆ ಹಸಿರು ಪರಿಸರ ನಿರ್ಮಾಣಕ್ಕೂ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕೈಜೋಡಿಸಬೇಕು ಎಂದು ಹೇಳಿದರು.
‘ಸೇವಾ ಸಂಕಲ್ಪ ಅಭಿಯಾನ’ದ ಮೂಲಕ ಸಮಾಜಮುಖಿ ಹಾಗೂ ಜನಪರ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಸಸಿ ನೆಡುವ ಕಾರ್ಯಕ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ನೆಟ್ಟ ಸಸಿಗಳ ಸಂರಕ್ಷಣೆ ಹಾಗೂ ಪೋಷಣೆಯ ಜವಾಬ್ದಾರಿಯನ್ನೂ ಸಮುದಾಯ ವಹಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಚಿಮ್ಮಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಸಿ ನೆಡುವ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮದಲ್ಲಿ ಹಸಿರು ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande