ಶಿವಾನಂದ ಕೌಜಲಗಿ ನಿಧನಕ್ಕೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ
ಬೆಂಗಳೂರು, 30 ಅಕ್ಟೋಬರ್ (ಹಿ.ಸ.): ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್
ದಿವಂಗತ ಶಿವಾನಂದ ಕೌಜಲಗಿ ಫೈಲ್ ಪೋಟೋ


ಬೆಂಗಳೂರು, 30 ಅಕ್ಟೋಬರ್ (ಹಿ.ಸ.):

ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ತಂದೆ, ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶಿವಾನಂದ ಕೌಜಲಗಿ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ತಿಳಿಸಿದ್ದಾರೆ.

ಬೈಲಹೊಂಗಲ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿದ್ದರು. ಶಿಕ್ಷಣ, ಸಹಕಾರ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲದೆ, ರಾಜಕೀಯ ಮತ್ತು ಸಾಮಾಜಿಕ ವಲಯಕ್ಕೂ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ, ಶಿವಾನಂದ ಕೌಜಲಗಿ ಅವರು ಕಳೆದ ಕೆಲವು ವರ್ಷಗಳಿಂದ ಚುನಾವಣಾ ರಾಜಕೀಯದಿಂದ ದೂರವಿದ್ದರೂ, ತಮ್ಮನ್ನು ನಂಬಿ ಬಂದ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತಿದ್ದ ಸಮಾಜಮುಖಿ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದ್ದಾರೆ.

ಜನಪ್ರತಿನಿಧಿಯಾಗಿ ಅಧಿಕಾರಾವಧಿಯಲ್ಲಿ ಅವರು ನೀಡಿದ ಕೊಡುಗೆಗಳು ಜನಮಾನಸದಲ್ಲಿ ಇಂದಿಗೂ ಉಳಿದಿವೆ. ಪುತ್ರ ಮಹಾಂತೇಶ ಕೌಜಲಗಿ ಮತ್ತು ಕುಟುಂಬದವರ ದುಃಖದಲ್ಲಿ ತಾವೂ ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಂತಾಪ ವ್ಯಕ್ತಪಡಿಸಿ, ಶಾಸಕರಾಗಿ, ಸಚಿವರಾಗಿ ಮತ್ತು ಸಂಸದರಾಗಿ ಜನಸೇವೆ ಸಲ್ಲಿಸಿದ್ದ ಕೌಜಲಗಿ ಅವರು ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಿಗೂ ಮಹತ್ವದ ಕೊಡುಗೆ ನೀಡಿದ್ದಾರೆ. ದೀರ್ಘಕಾಲದ ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ, ಸೇವಾ ಬದ್ಧತೆ ಮತ್ತು ದೂರದೃಷ್ಟಿಯಿಂದ ಗುರುತಿಸಿಕೊಂಡಿದ್ದ ಅವರ ಅಗಲಿಕೆ ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಂತಾಪ ಸೂಚಿಸಿ, ಕೌಜಲಗಿ ಅವರು ರಾಜಕೀಯ ಕ್ಷೇತ್ರದ ಜತೆಗೆ ಶೈಕ್ಷಣಿಕ ರಂಗದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ತಲುಪಿಸುವಲ್ಲಿ ಹಾಗೂ ಆ ಭಾಗದಲ್ಲಿ ಶೈಕ್ಷಣಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯಿಂದ ಹಿರಿಯ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದವರು, ಅಭಿಮಾನಿಗಳು ಈ ದುಃಖವನ್ನು ಭರಿಸುವ ಶಕ್ತಿ ಪಡೆಯಲಿ ಎಂದು ಗಣ್ಯರು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande