ರೈತರ ಬೆಳೆಹಾನಿ ಪರಿಹಾರ ವಿಳಂಬ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, 30 ಅಕ್ಟೋಬರ್ (ಹಿ.ಸ.): ರೈತರ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ
ಪ್ರತಿಪಕ್ಷ ನಾಯಕ ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 30 ಅಕ್ಟೋಬರ್ (ಹಿ.ಸ.):

ರೈತರ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಇನ್ನೆಷ್ಟು ಕುಂಟು ನೆಪಗಳು ಬೇಕು ಎಂದು ಪ್ರಶ್ನಿಸಿದ್ದಾರೆ.

ಮುಂಗಾರು ಮಳೆ ಕೈಕೊಟ್ಟು ನಾಲ್ಕು ತಿಂಗಳು ಕಳೆದಿದ್ದರೂ ಬೆಳೆಹಾನಿ ಮಾಹಿತಿ ಸಂಗ್ರಹಿಸಿ ಪರಿಹಾರದ ಪಟ್ಟಿ ಸಿದ್ಧಪಡಿಸದ ಸರ್ಕಾರ ಏನು ಮಾಡುತ್ತಿತ್ತು ಎಂದು ಟೀಕಿಸಿದ್ದಾರೆ.

ಈಗ ಹಣ್ಣು ತಂತ್ರಾಂಶ, ಆಧಾರ್ ಜೋಡಣೆ, ಬ್ಯಾಂಕ್ ಖಾತೆ ಹಾಗೂ ಪಹಣಿ ದಾಖಲೆಗಳ ಹೆಸರಿನಲ್ಲಿ ಹಲವು ಷರತ್ತುಗಳನ್ನು ವಿಧಿಸಿ ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬದಲು ಮತ್ತಷ್ಟು ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ.

ಹಿಂದಿನ ಬರ ಪರಿಹಾರ ಮತ್ತು ಬೆಳೆಹಾನಿ ಪರಿಹಾರ ವಿತರಣೆಯಲ್ಲಿನ ಲೋಪಗಳಿಂದಲೂ ಸರ್ಕಾರ ಪಾಠ ಕಲಿತಿಲ್ಲ. ತಂತ್ರಾಂಶದ ಸಮಸ್ಯೆ ಹಾಗೂ ದಾಖಲೆಗಳ ಗೊಂದಲಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯೇ ಹೊರತು ರೈತರ ಹೊಣೆಗಾರಿಕೆಯಲ್ಲ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ರೈತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲವೇ? ಖಜಾನೆ ಖಾಲಿಯಾಗಿದೆಯೇ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಅವರು, ಅರ್ಹ ರೈತರ ಪಟ್ಟಿಯನ್ನು ತಕ್ಷಣ ಅಂತಿಮಗೊಳಿಸಬೇಕು, ತಾಂತ್ರಿಕ ಸಮಸ್ಯೆಗಳನ್ನು ಸರ್ಕಾರವೇ ಬಗೆಹರಿಸಬೇಕು ಹಾಗೂ ನೇರ ನಗದು ವರ್ಗಾವಣೆ ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣವನ್ನು ವಿಳಂಬವಿಲ್ಲದೆ ಜಮೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಬೆಳೆ ನಷ್ಟಕ್ಕೆ ಪರಿಹಾರ ಕೇಳುವುದು ಭಿಕ್ಷೆಯಲ್ಲ, ಅದು ಅವರ ಹಕ್ಕು ಎಂದು ಪ್ರತಿಪಾದಿಸಿರುವ ಅಶೋಕ್, ರೈತರ ತಾಳ್ಮೆಯನ್ನು ಪರೀಕ್ಷಿಸುವುದನ್ನು ಸರ್ಕಾರ ನಿಲ್ಲಿಸಬೇಕು. ಪರಿಹಾರ ನೀಡಲು ಸಾಧ್ಯವಾಗದಿದ್ದರೆ ರೈತರ ಕ್ಷಮೆ ಕೇಳಿ ರಾಜೀನಾಮೆ ನೀಡಿ ಮನೆಗೆ ತೆರಳಬೇಕು ಎಂದು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande