
ಬೆಂಗಳೂರು, 30 ಅಕ್ಟೋಬರ್ (ಹಿ.ಸ.):
ಭೀಕರ ಬರಗಾಲದಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬದಲು ರಾಜ್ಯ ಸರ್ಕಾರ 17 ಕಠಿಣ ಷರತ್ತುಗಳನ್ನು ವಿಧಿಸಿ ರೈತರನ್ನು ಪರಿಹಾರದಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ತುರ್ತು ನೆರವು ನೀಡುವ ಬದಲು ಒಂದಲ್ಲೊಂದು ನೆಪ ಹುಡುಕುತ್ತಿದೆ ಎಂದು ಟೀಕಿಸಿದ್ದಾರೆ.
ಉಚಿತ ಗ್ಯಾರಂಟಿ ಯೋಜನೆಗಳು ಹಾಗೂ ದುರಾಡಳಿತದಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ. ಹತಾಶ ಸ್ಥಿತಿಯಲ್ಲಿರುವ ಸರ್ಕಾರ ರೈತರಿಗೆ ಎಕರೆಗೆ ಕೇವಲ 2,500 ರೂ.ಗಳ ನೆರವು ನೀಡಲೂ 17 ಕಠಿಣ ಷರತ್ತುಗಳನ್ನು ವಿಧಿಸಿರುವುದು ದೊಡ್ಡ ದುರಂತ. ಇದು ಸರ್ಕಾರದ ಆಡಳಿತಾತ್ಮಕ ವೈಫಲ್ಯ ಹಾಗೂ ರೈತರ ಬಗೆಗಿನ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಜೆಗಳ ನೆರವಿಗೆ ಧಾವಿಸುವುದು ಪ್ರಜಾಸತ್ತಾತ್ಮಕ ಸರ್ಕಾರದ ಮೂಲಭೂತ ಹೊಣೆಗಾರಿಕೆ. ಕಾಗದದ ಮೇಲಿನ ಕಠಿಣ ನಿಯಮಗಳು ಮತ್ತು ತಾಂತ್ರಿಕ ಅಡೆತಡೆಗಳಿಂದ ರೈತರ ಸಂಕಷ್ಟ ಪರಿಹಾರವಾಗುವುದಿಲ್ಲ. ಅನ್ನ ನೀಡುವ ರೈತರ ಕಣ್ಣೀರು ಒರೆಸುವುದು ಸರ್ಕಾರದ ಕರ್ತವ್ಯವೇ ಹೊರತು, ತಾಂತ್ರಿಕ ನೆಪಗಳನ್ನು ಮುಂದಿಟ್ಟು ಅವರನ್ನು ವಂಚಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಪ್ರತಿಯೊಬ್ಬ ರೈತನ ಹಕ್ಕಿಗಾಗಿ ಬೀದಿಗಿಳಿದು ಹೋರಾಡಲು ಬಿಜೆಪಿ ಕಾರ್ಯಕರ್ತರು ಸಿದ್ಧರಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪ್ರಚಾರದ ಗೀಳನ್ನು ಬದಿಗಿಟ್ಟು ಪರಿಹಾರ ವಿತರಣೆಗೆ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸಬೇಕು. ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ರೈತನಿಗೂ ತಕ್ಷಣವೇ ಸೂಕ್ತ ಬರ ಪರಿಹಾರ ತಲುಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕೋಟ್ಯಂತರ ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ನೇರವಾಗಿ ವರ್ಗಾಯಿಸುವ ಮೂಲಕ ಕೃಷಿಕರ ಬದುಕಿಗೆ ಆಸರೆಯಾಗಿ ನಿಲ್ಲುವ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರ ಸರ್ಕಾರ ರೈತರ ಗೌರವ ಮತ್ತು ಶ್ರೇಯೋಭಿವೃದ್ಧಿಗೆ ನಿರಂತರ ನೆರವು ನೀಡುತ್ತಿದ್ದರೆ, ರಾಜ್ಯ ಸರ್ಕಾರ ಬರದಿಂದ ತತ್ತರಿಸಿರುವ ರೈತರಿಗೆ ಕನಿಷ್ಠ ನೆರವು ನೀಡಲೂ ವಿಳಂಬ ಮಾಡುತ್ತಿದೆ. ನೂರಾರು ನೆಪಗಳು ಹಾಗೂ ಕಠಿಣ ಷರತ್ತುಗಳ ಮೂಲಕ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿರುವ ಅವರು, ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಣ್ಣೀರು ಒರೆಸಬೇಕು ಎಂದು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.