
ಬೆಂಗಳೂರು, 31 ಅಕ್ಟೋಬರ್ (ಹಿ.ಸ.):
ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆಯಿದ್ದು, ನವೆಂಬರ್ 1ರಿಂದ 3ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಲ್ಲದೆ, ನವೆಂಬರ್ 3ರಿಂದ 5ರವರೆಗೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಈ ಕುರಿತು ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನವೆಂಬರ್ 1ರಿಂದ 3ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ
ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಆರಂಭದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಲ್ಲಿ ಒಣಹವೆ ಇರಲಿದೆ.
ನಂತರ ಮೂರು ಕರಾವಳಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 3ರಿಂದ 5ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಬಿರುಗಾಳಿ ಆತಂಕ
ಬೆಳಗಾವಿ, ಧಾರವಾಡ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಈ ಭಾಗಗಳಲ್ಲಿ ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ
ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನು ತುಮಕೂರು, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಟ್ಟಾರೆ, ನವೆಂಬರ್ ಮೊದಲ ವಾರದಲ್ಲಿ ರಾಜ್ಯದ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ವಿಶೇಷವಾಗಿ ಕರಾವಳಿ ಭಾಗದ ಜನರು ಭಾರಿ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಸಿಡಿಲು ಹಾಗೂ ಬಿರುಗಾಳಿ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R