
ಮೈಸೂರು, 04 ಅಕ್ಟೋಬರ್ (ಹಿ.ಸ.):
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ದಸರಾ ನಾಡಕುಸ್ತಿ’ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.
ಡಿ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆದ ಸಾಂಪ್ರದಾಯಿಕ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು, 2026ರ ದಸರಾ ಕುಸ್ತಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,ನಮ್ಮ ಮಣ್ಣಿನ ಕ್ರೀಡೆಯಾದ ಕುಸ್ತಿಗೆ ಸಾಂಸ್ಕೃತಿಕ ಹಿರಿಮೆಯ ದಸರೆಯ ಆಚರಣೆಯಷ್ಟೇ ಇತಿಹಾಸವಿದೆ. ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ದಸರಾ ಕುಸ್ತಿ ಸಮಿತಿ ಕಾರ್ಯಾಧ್ಯಕ್ಷ ಧರ್ಮೇಂದ್ರ, ಕಾರ್ಯದರ್ಶಿ ನರಸಿಂಹ ಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳು, ಕುಸ್ತಿಪಟುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.