




ಬಳ್ಳಾರಿ, 07 ಅಕ್ಟೋಬರ್ (ಹಿ.ಸ.):
ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅವರ ನೆರವಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಬಳ್ಳಾರಿ ತಾಲೂಕಿನ ಬರಪೀಡಿತ ಹಲಕುಂದಿ ಗ್ರಾಮದಲ್ಲಿ ತೊಗರಿ ಬಿತ್ತನೆ ಮಾಡಿರುವ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದ ಸುಮಾರು 240 ತಾಲೂಕುಗಳ ಪೈಕಿ ಕರಾವಳಿ ಭಾಗದ ಕೆಲವೇ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ತಾಲೂಕುಗಳಲ್ಲಿಯೂ ಬರದ ಪರಿಣಾಮ ಗೋಚರಿಸುತ್ತಿದೆ. ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ 23 ತಾಲೂಕುಗಳಲ್ಲಿ ಗ್ರೌಂಡ್ ಟ್ರೂತಿಂಗ್ ನಡೆಯುತ್ತಿದೆ. ಅವುಗಳಲ್ಲಿ ಸುಮಾರು 10ರಿಂದ 15 ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರುವ ಸಾಧ್ಯತೆಯಿದೆ ಎಂದು ತಿಳಿಸಿದರು.
ರಾಜ್ಯದ ರೈತರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಹಲವೆಡೆ ರೈತರು ಮೊದಲು ತೊಗರಿ ಬಿತ್ತಿದ್ದು, ಅದು ಮಳೆಯ ಕೊರತೆಯಿಂದ ಹಾನಿಗೊಳಗಾದ ಬಳಿಕ ಸ್ವಲ್ಪ ಮಳೆ ಬಂದಾಗ ಮತ್ತೆ ಜೋಳ ಸೇರಿದಂತೆ ಪರ್ಯಾಯ ಬೆಳೆ ಬಿತ್ತಿದ್ದಾರೆ. ಆದರೆ ಆ ಬೆಳೆಯೂ ಉಳಿದಿಲ್ಲ. ಪರಿಣಾಮ ರೈತನ ಕೈಗೆ ಯಾವುದೇ ಬೆಳೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ ಅವರು ಪರಿಸ್ಥಿತಿಯನ್ನು ವಿವರಿಸಿದರು.
ಕರ್ನಾಟಕದಲ್ಲಿ ಸುಮಾರು ಶೇ.90ರಷ್ಟು ಬೆಳೆ ಹಾನಿಯಾಗಿದೆ. ಮಳೆಯಾಶ್ರಿತ ಪ್ರದೇಶಗಳಷ್ಟೇ ಅಲ್ಲದೆ ನೀರಾವರಿ ಪ್ರದೇಶಗಳಲ್ಲಿಯೂ ಸಂಕಷ್ಟವಿದೆ. ಮಹಾರಾಷ್ಟ್ರ ಭಾಗದಲ್ಲಿ ಮಳೆಯಾದ ಪರಿಣಾಮ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಗೆ ಸ್ವಲ್ಪ ನೀರು ಬಂದಿದೆ. ಅದೇ ರೀತಿ ಕೆಆರ್ಎಸ್, ಹಾರಂಗಿ ಹಾಗೂ ಕಬಿನಿ ಭಾಗಗಳಲ್ಲಿಯೂ ಒಂದಿಷ್ಟು ಮಳೆಯಾಗಿದೆ. ಲಭ್ಯವಿದ್ದ ನೀರಿನ ಒಂದು ಭಾಗವನ್ನು ತಮಿಳುನಾಡಿಗೆ ಬಿಡಬೇಕಾದ ಪರಿಸ್ಥಿತಿಯೂ ಎದುರಾಗಿದೆ ಎಂದು ಹೇಳಿದರು.
ಬಳ್ಳಾರಿ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬರದ ಪರಿಣಾಮ ಹೆಚ್ಚು ತೀವ್ರವಾಗಿದೆ. ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಭೇಟಿ ನೀಡಿದಾಗಲೂ ಈ ಭಾಗದ ಗಂಭೀರ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಗಂಭೀರ: ಬರದಿಂದ ಬೆಳೆ ಮಾತ್ರವಲ್ಲದೆ ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗುತ್ತಿದೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಕುಡಿಯುವ ನೀರು ಸೇರಿದಂತೆ ತುರ್ತು ಬರ ಪರಿಹಾರ ಕಾಮಗಾರಿಗಳಿಗಾಗಿ ಹಣ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಂಡು ರೈತರು ಮತ್ತು ಸಾರ್ವಜನಿಕರ ನೆರವಿಗೆ ಬರಬೇಕೆಂದು ಸೂಚಿಸಲಾಗಿದೆ ಎಂದರು.
“ಸರ್ಕಾರ ರೈತರ ಹಾಗೂ ಜನರ ನೆರವಿಗೆ ಬರಬೇಕು. ನಮಗೆ ಎಷ್ಟು ಸಾಧ್ಯವೋ ಅಷ್ಟು ನೆರವು ನೀಡಲು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಹೇಳಿದರು.
ಕೇಂದ್ರದ ಪಾಲು ಇನ್ನೂ ಬಂದಿಲ್ಲ; ಮೊದಲ ಕಂತಿನ ಪರಿಹಾರ ಬಿಡುಗಡೆಗೆ ಕ್ರಮ
ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಒಂದು ಹೆಕ್ಟೇರ್ಗೆ ₹8,500 ಪರಿಹಾರ ನೀಡುವ ವ್ಯವಸ್ಥೆ ಇದೆ. ಆದರೆ ಕೇಂದ್ರದಿಂದ ಇದುವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಆದರೂ ಕೇಂದ್ರದ ಹಣಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಪಾಲಿನಿಂದ ರೈತರಿಗೆ ಮೊದಲ ಕಂತಾಗಿ ₹2,500 ನೀಡಲು ಕ್ರಮ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ತಿಳಿಸಿದರು.
ಈ ಕುರಿತು ಸರ್ಕಾರದ ಆದೇಶ ಈಗಾಗಲೇ ಹೊರಬಂದಿದ್ದು, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರೈತರಿಗೆ ಇನ್ನಷ್ಟು ನೆರವು ನೀಡಲಾಗುವುದು ಎಂದರು.
ಕೇಂದ್ರದಿಂದ ಒಂದು ಪೈಸೆಯೂ ಬಂದಿಲ್ಲ ಎಂದು ಅವರನ್ನು ದೂಷಿಸುತ್ತಾ ಕುಳಿತುಕೊಳ್ಳುವುದಿಲ್ಲ. ನಮ್ಮಿಂದ ಸಾಧ್ಯವಾದ ನೆರವನ್ನು ನಾವು ನೀಡುತ್ತೇವೆ. ರೈತನನ್ನು ಸಂಕಷ್ಟದಲ್ಲಿ ಕೈಬಿಡುವುದಿಲ್ಲ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್