ಬೆಂಗಳೂರಿನ ಎಲ್ಲ ರಸ್ತೆಗಳಲ್ಲಿ ಗುಂಡಿ ಮುಚ್ಚಲು ತಕ್ಷಣ ಕ್ರಮ: ಐದು ನಗರ ಪಾಲಿಕೆಗಳ ಅಧಿಕಾರಿಗಳಿಗೆ ಮಹೇಶ್ವರ ರಾವ್ ಸೂಚನೆ
ಬೆಂಗಳೂರು, 11 ನವೆಂಬರ್ (ಹಿ.ಸ.): ಬೆಂಗಳೂರಿನ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ ತಕ್ಷಣ ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ರಸ್ತೆ ದುರಸ್ತಿ ಕಾರ್ಯಗಳ ಕುರಿತು ಬುಧವಾರ ನಡೆದ
ಜಿಬಿಎ ಪ್ರಗತಿ ಪರಿಶೀಲನಾ ಸಭೆ


ಬೆಂಗಳೂರು, 11 ನವೆಂಬರ್ (ಹಿ.ಸ.):

ಬೆಂಗಳೂರಿನ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ ತಕ್ಷಣ ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ರಸ್ತೆ ದುರಸ್ತಿ ಕಾರ್ಯಗಳ ಕುರಿತು ಬುಧವಾರ ನಡೆದ ಆನ್‌ಲೈನ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಮುಖ ಮುಖ್ಯ ರಸ್ತೆಗಳು ಹಾಗೂ ಸಂಪರ್ಕ ರಸ್ತೆಗಳಲ್ಲಿರುವ ಗುಂಡಿಗಳನ್ನು ಆದ್ಯತೆಯ ಮೇರೆಗೆ ಗುರುತಿಸಿ ಕೂಡಲೇ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.

ಬಿಳಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿರುವ ಮತ್ತು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಿರುವ ರಸ್ತೆಗಳಲ್ಲಿ ಗುಂಡಿಗಳಿಲ್ಲದಂತೆ ನೋಡಿಕೊಳ್ಳಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.

ಗುತ್ತಿಗೆದಾರರಿಗೂ ದುರಸ್ತಿ ಹೊಣೆಗಾರಿಕೆ

ದೋಷ ಬಾಧ್ಯತಾ ಅವಧಿಯಲ್ಲಿರುವ (ಡಿಎಲ್‌ಪಿ) ರಸ್ತೆಗಳಲ್ಲಿ ಗುಂಡಿಗಳು ಕಂಡುಬಂದರೆ ಸಂಬಂಧಪಟ್ಟ ಗುತ್ತಿಗೆದಾರರೇ ಅವುಗಳನ್ನು ದುರಸ್ತಿ ಮಾಡಬೇಕು. ಈ ಅವಧಿಗೆ ಒಳಪಡದ ರಸ್ತೆಗಳಲ್ಲಿ ಸಂಬಂಧಪಟ್ಟ ನಗರ ಪಾಲಿಕೆಗಳು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಅನುಮತಿಯಿಲ್ಲದೆ ರಸ್ತೆ ಅಗೆದರೆ ದಂಡ

ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆಗಳನ್ನು ಪೂರ್ವಾನುಮತಿ ಪಡೆಯದೆ ಅಗೆದು ಕಾಮಗಾರಿ ನಡೆಸುವ ಬೆಸ್ಕಾಂ, ಬೆಂಗಳೂರು ಜಲಮಂಡಳಿ ಸೇರಿದಂತೆ ಇತರ ಸಂಸ್ಥೆಗಳು ಹಾಗೂ ಸಂಘಟನೆಗಳ ವಿರುದ್ಧ ದಂಡ ವಿಧಿಸಬೇಕು. ಅನುಮತಿಯಿಲ್ಲದ ರಸ್ತೆ ಅಗೆಯುವಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಿರಿಯ ಅಧಿಕಾರಿಗಳು ಖುದ್ದಾಗಿ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚುವ ಕಾರ್ಯವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವುದನ್ನು ಖಾತರಿಪಡಿಸಬೇಕು. ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ಅದರ ವಿವರಗಳನ್ನು ನಿಗದಿತ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಹೇಳಿದರು.

ನೀರು ಸೋರಿಕೆ, ತ್ಯಾಜ್ಯ ಸಮಸ್ಯೆ ಪರಿಹರಿಸಲು ಸೂಚನೆ

ಹೊರ ವರ್ತುಲ ರಸ್ತೆಯ ಇಮ್ಮಡಿಹಳ್ಳಿ ರಸ್ತೆಯಲ್ಲಿ ಬೆಂಗಳೂರು ಜಲಮಂಡಳಿಯ ಕೊಳವೆ ಮಾರ್ಗದಿಂದ ಆಗುತ್ತಿರುವ ನೀರಿನ ಸೋರಿಕೆಯನ್ನು ತಕ್ಷಣ ಸರಿಪಡಿಸಬೇಕು. ಅತ್ತಿಗುಪ್ಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹೇಶ್ವರ ರಾವ್ ಸೂಚಿಸಿದರು.

ಬೆಂಗಳೂರಿನ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸುರಕ್ಷಿತ, ಸುಗಮ ಹಾಗೂ ಉತ್ತಮ ರಸ್ತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande