ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಬೆಂಗಳೂರು, 11 ನವೆಂಬರ್ (ಹಿ.ಸ.): ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತವನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಖಜಾನೆ ಖಾಲಿ ಮಾಡಿ, ಅಗತ್ಯ ವಸ್ತುಗಳ ಬೆಲೆಗಳನ್ನು ನಿರಂತರವ
ಬಿಜೆಪಿ ಪ್ರತಿಭಟನೆ


ಬೆಂಗಳೂರು, 11 ನವೆಂಬರ್ (ಹಿ.ಸ.):

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತವನ್ನು ಖಂಡಿಸಿ ಬಿಜೆಪಿ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಖಜಾನೆ ಖಾಲಿ ಮಾಡಿ, ಅಗತ್ಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೇರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಲೆ ಏರಿಕೆ ವಿರುದ್ಧ ಧ್ವನಿಯೆತ್ತಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜನರ ಸಹನೆಯ ಕಟ್ಟೆ ಒಡೆದಿದೆ. ರಾಜ್ಯದ ತುಘಲಕ್ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆಯ ಮೂಲಕ ಜನರ ಮೇಲೆ ನಿರಂತರ ಹೊರೆ ಹೊರಿಸುತ್ತಿರುವ ಜನವಿರೋಧಿ ಸರ್ಕಾರದ ವಿರುದ್ಧ ರಾಜ್ಯದ ಜನತೆಯ ಪರವಾಗಿ ಹೋರಾಟ ನಡೆಸಲಾಗುತ್ತಿದೆ. ಬೆಲೆ ಏರಿಕೆ ಹಿಂಪಡೆಯುವವರೆಗೂ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಗ್ರಹದ ಹೋರಾಟವನ್ನು ವಿರಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಅಶ್ವತ್ಥನಾರಾಯಣ ಸೇರಿದಂತೆ ಪಕ್ಷದ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande