ನಂಜನಗೂಡಿನ ಬಾಳೆ ತೋಟದಲ್ಲಿ ಮಾದಕ ವಸ್ತು ಪತ್ತೆಯಾಗಿಲ್ಲ: ಎಸ್ಪಿ ಸ್ಪಷ್ಟನೆ
ಬಾಳೆ ಗೊನೆಗಳ ಮೂಲಕ ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಬಾಳೆ ತೋಟದಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟಪಡಿಸಿದ್ದಾರೆ. ಈ ವರ್ಷ ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ 215 ಪ್ರಕರಣ ದಾಖಲಾಗಿವೆ.
Mysuru-SP-Clarifies-Banana-Consignment-Drug-Trafficking-Case


ಮೈಸೂರು, 12 ನವೆಂಬರ್ (ಹಿ.ಸ.):

ಬಾಳೆ ಗೊನೆಗಳ ಮೂಲಕ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಬಾಳೆ ತೋಟದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆ ಗೊನೆಗಳ ಮೂಲಕ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದವನಾಗಿದ್ದು, ನಂಜನಗೂಡಿನಲ್ಲಿ ಬಾಳೆ ತೋಟ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆತನ ತೋಟವನ್ನು ಪರಿಶೀಲಿಸಿದಾಗ ಯಾವುದೇ ಮಾದಕ ವಸ್ತು ಅಥವಾ ಅದಕ್ಕೆ ಸಂಬಂಧಿಸಿದ ಪದಾರ್ಥಗಳು ಪತ್ತೆಯಾಗಿಲ್ಲ ಎಂದು ತಿಳಿಸಿದರು.

ನಂಜನಗೂಡಿನಿಂದ ಬಾಳೆ ಗೊನೆಗಳ ಮೂಲಕ ಮಾದಕ ವಸ್ತು ಸಾಗಾಟ ಮಾಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇರಳ ಪೊಲೀಸರೂ ಆರೋಪಿ ನಂಜನಗೂಡಿನಿಂದ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಬಂಧಿತ ಆರೋಪಿಯ ಬಳಿ ಸುಮಾರು 800 ಗ್ರಾಂ ಮಾದಕ ವಸ್ತು ಪತ್ತೆಯಾಗಿದ್ದು, ಅದನ್ನು ಬೆಂಗಳೂರಿನಿಂದ ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮೈಸೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ನಂಜನಗೂಡಿನ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಳೆ ಬೆಳೆಯಲಾಗುತ್ತಿರಲಿಲ್ಲ. ಅಲ್ಲದೆ, ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ವಸ್ತುಗಳು ಅಲ್ಲಿ ಪತ್ತೆಯಾಗಿಲ್ಲ ಎಂದು ವಿವರಿಸಿದರು.

ಮೈಸೂರು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರ್ಷ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಒಟ್ಟು 215 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande