
ಬೆಂಗಳೂರು, 13 ನವೆಂಬರ್ (ಹಿ.ಸ.):
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿಯ ಕಣ್ಣೆದುರೇ ಐದರಿಂದ ಆರು ಮಂದಿ ದುಷ್ಕರ್ಮಿಗಳ ತಂಡ ಉದ್ಯಮಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದೆ.
ಮೃತರನ್ನು 39 ವರ್ಷದ ಚರಣ್ ಗೌಡ ಎಂದು ಗುರುತಿಸಲಾಗಿದೆ. ಇವರು ಧಣಿ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕರಾಗಿದ್ದು, ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.
ಯಲಹಂಕ ನ್ಯೂ ಟೌನ್ನ ಖಾಸಗಿ ಕಾಲೇಜೊಂದರ ಸಮೀಪ, ಬ್ಯಾಂಕ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ.
ಚರಣ್ ಗೌಡ ಅವರು ಪತ್ನಿಯೊಂದಿಗೆ ಕೋಗಿಲು ನಿವಾಸದಿಂದ ಯಲಹಂಕ ನ್ಯೂ ಟೌನ್ನಲ್ಲಿರುವ ತಮ್ಮ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಂಕ್ನ ಮೇಲ್ಮಹಡಿಯಲ್ಲಿದ್ದ ಕಚೇರಿಗೆ ತೆರಳುವ ಮಾರ್ಗದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ.
ಸುಮಾರು ಐದರಿಂದ ಆರು ಮಂದಿ ಯುವಕರಿದ್ದ ತಂಡ ಮಾರಕಾಸ್ತ್ರಗಳಿಂದ ಚರಣ್ ಗೌಡ ಅವರ ತಲೆಗೆ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ಕೆಲವೇ ಸೆಕೆಂಡ್ಗಳಲ್ಲಿ ಕೃತ್ಯ ಎಸಗಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಪತ್ನಿಯ ಕಣ್ಣೆದುರೇ ಬರ್ಬರ ಹತ್ಯೆ
ಪತಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದುದನ್ನು ಕಂಡ ಪತ್ನಿ ಆಘಾತಕ್ಕೊಳಗಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಸ್ಥಳದಲ್ಲಿದ್ದವರ ಬಳಿ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದ್ದಾರೆ.
ಆದರೆ, ತೀವ್ರವಾಗಿ ಗಾಯಗೊಂಡಿದ್ದ ಚರಣ್ ಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳಿಕ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಚರಣ್ ಗೌಡ ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವರೊಂದಿಗೆ ವಿವಾದ ಉಂಟಾಗಿತ್ತು ಎನ್ನಲಾಗಿದೆ.
ಇದೇ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸುಮಾರು 22 ವರ್ಷದ ಯುವಕರ ತಂಡ ಕೃತ್ಯ ಎಸಗಿರುವ ಸಾಧ್ಯತೆಯ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಹತ್ಯೆಗೆ ನಿಖರ ಕಾರಣವೇನು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R