ಬಾದಾಮಿ ನಗರದ ಅಭಿವೃದ್ಧಿಗೆ ವೇಗ: ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ - ಹೊಸಗೌಡ್ರ ಕಾಲೋನಿ ಸಂಪರ್ಕ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೂಮಿಪೂಜೆ
ಬಾಗಲಕೋಟೆ, 13 ನವೆಂಬರ್ (ಹಿ.ಸ.) ಐತಿಹಾಸಿಕ ಬಾದಾಮಿ ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಜನಪ್ರಿಯ ಶಾಸಕರಾದ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಮುಖ್ಯ ರಸ್ತೆಯಿಂದ ಹೊಸಗೌಡ್ರ ಕಾಲೋನಿಯ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ಸಿ
ಸಿಸಿ ರಸ್ತೆ ಕಾಮಗಾರಿ


ಬಾಗಲಕೋಟೆ, 13 ನವೆಂಬರ್ (ಹಿ.ಸ.)

ಐತಿಹಾಸಿಕ ಬಾದಾಮಿ ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಜನಪ್ರಿಯ ಶಾಸಕರಾದ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಮುಖ್ಯ ರಸ್ತೆಯಿಂದ ಹೊಸಗೌಡ್ರ ಕಾಲೋನಿಯ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ಸಿಸಿ (ಕಾಂಕ್ರೀಟ್) ರಸ್ತೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ವಿಧಿವತ್ತಾಗಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಮುಖ್ಯ ರಸ್ತೆ ಮತ್ತು ಹೊಸಗೌಡ್ರ ಕಾಲೋನಿ ನಡುವಿನ ಈ ಸಂಪರ್ಕ ರಸ್ತೆಯು ಸುಗಮ ಸಂಚಾರಕ್ಕೆ ಅತ್ಯಂತ ಮಹತ್ವದ್ದಾಗಿದೆ. ಮಳೆಗಾಲದಲ್ಲಿ ಹಾಗೂ ದೈನಂದಿನ ಓಡಾಟಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸುಸಜ್ಜಿತ ಸಿಸಿ ರಸ್ತೆ ನಿರ್ಮಿಸಿಕೊಡುವಂತೆ ಸ್ಥಳೀಯ ನಿವಾಸಿಗಳು ಶಾಸಕರಲ್ಲಿ ಮನವಿ ಮಾಡಿದ್ದರು. ಸಾರ್ವಜನಿಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಅನುದಾನ ಮಂಜೂರು ಮಾಡಿಸಿ, ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು, ಬಾದಾಮಿ ನಗರ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದೆ. ನಾಗರಿಕರಿಗೆ ಉತ್ತಮ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹಂತ-ಹಂತವಾಗಿ ಎಲ್ಲಾ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಅಲ್ಲದೆ, ನಿಗದಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ರಸ್ತೆ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದೆ ಅತ್ಯುತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಮ್ಮ ಬಡಾವಣೆಯ ಪ್ರಮುಖ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕರ ಕಾರ್ಯಕ್ಕೆ ಹೊಸಗೌಡ್ರ ಕಾಲೋನಿ ಹಾಗೂ ಸುತ್ತಮುತ್ತಲಿನ ನಿವಾಸಿಗಳು ಹರ್ಷ ವ್ಯಕ್ತಪಡಿಸಿ, ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್ಗಳು ಹಾಗೂ ಬಡಾವಣೆಯ ಹಿರಿಯರು ಮತ್ತು ನಾಗರಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande